ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ದ್ವೇಷಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ಕಚೇರಿಗೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಿದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.
ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ ಹಾಗೂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಮುಂಚಿತವಾಗಿ ಘೋಷಿಸಿತ್ತು. ಇದರ ಹಿನ್ನೆಲೆ ನಗರದ ಜೋಡುಕಟ್ಟೆ ಹಾಗೂ ಶಾಸಕ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಇದೇ ವೇಳೆ ಶಾಸಕ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರೂ ಜಮಾಯಿಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು.

ಬಳಿಕ ಜೋಡುಕಟ್ಟೆಯಲ್ಲಿ ಜಮಾಯಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಶಾಸಕ ಕಚೇರಿಯತ್ತ ಮೆರವಣಿಗೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದರು.
ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದರು. ಮತ್ತೊಂದೆಡೆ ಶಾಸಕ ಕಚೇರಿ ಬಳಿ ಸೇರಿದ್ದ ಬಿಜೆಪಿ ಕಾರ್ಯಕರ್ತರೂ ಘೋಷಣೆಗಳನ್ನು ಕೂಗಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿತು. ಆದರೆ, ಬಿಗಿ ಪೊಲೀಸ್ ಬಂದೋಬಸ್ತ್‌ನಿಂದ ಯಾವುದೇ ಅಹಿತಕರ ಘಟನೆ ಸಂಭವಿಸದೆ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿ ಇರಿಸಲಾಯಿತು.







