ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.
ಉಪ್ಪೂರು ಗ್ರಾಮದ ಕೊಳಲಗಿರಿಯ ಸೇಕ್ರೆಡ್ ಹಾರ್ಟ್ ಚರ್ಚ್ನ ಸೌಹಾರ್ದ ಸಭಾಭವನದಲ್ಲಿ ಶುಕ್ರವಾರ ಪ್ರಜಾಸೇವಾ ಇಲಾಖೆ ಹಾಗೂ ಬ್ರಹ್ಮಾವರ ತಾಲೂಕು ಆಡಳಿತದ ಸಹಯೋಗದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರಕಾರದ ನೂತನ ಯೋಜನೆಯಾದ ಪ್ರಜಾಸೇವಾ ಆಂದೋಲನದ ಮೂಲಕ ಅಧಿಕಾರಿಗಳನ್ನು ಜನರ ಬಳಿಗೆ ಕರೆದೊಯ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಆಡಳಿತ ವ್ಯವಸ್ಥೆಗೆ ಚುರುಕು ನೀಡುವುದು, ಜನರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸುವುದು ಹಾಗೂ ಸರಕಾರಿ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದರು.
ಉಡುಪಿ ಬುದ್ಧಿವಂತರ ಜಿಲ್ಲೆಯಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸುತ್ತಿದ್ದಾರೆ. ಜಿಲ್ಲೆಯ ಆರ್ಥಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಇದು ಕೂಡ ಒಂದು ಕಾರಣವಾಗಿದೆ. ವಿವಿಧ ಸರಕಾರಿ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆಯಿದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸಾರ್ವಜನಿಕ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಬೇಕು ಎಂದು ಒತ್ತಾಯಿಸಿದರು.
ಸರಕಾರದ ಯೋಜನೆಗಳ ಪ್ರಯೋಜನ ಜನರಿಗೆ ತಲುಪಿಸಲು ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮನವಿ ಮಾಡಿದರು.
ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ. ಸುನೀತಾ ಶೆಟ್ಟಿ ಮಾತನಾಡಿ, ಜನಸೇವೆ ಮಾಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಪ್ರಜಾಸೇವಾ ಆಂದೋಲನ ಉತ್ತಮ ಅವಕಾಶವಾಗಿದೆ. ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಒಂದೇ ಸೂರಿನಡಿ ಪರಿಹಾರ ಒದಗಿಸುವ ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ನಾಗರಿಕ ಸೇವೆಗಳನ್ನು ನಿಗದಿತ ಕಾಲಮಿತಿಯಲ್ಲಿ ಮನೆಬಾಗಿಲಿಗೆ ತಲುಪಿಸುವುದು ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಗುಣಮಟ್ಟದ ಸ್ಪಂದನೆ ನೀಡುವುದು ಕಾರ್ಯಕ್ರಮದ ಉದ್ದೇಶವಾಗಿದೆ. ರಾಜ್ಯ ಸರಕಾರವು ಸೆಪ್ಟೆಂಬರ್ 5ರಿಂದ ಪ್ರತೀ ಶನಿವಾರ ರಾಜ್ಯಾದ್ಯಂತ ಪ್ರಜಾಸೇವಾ ಆಂದೋಲನ ಸಭೆಗಳನ್ನು ನಡೆಸುತ್ತಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಭೆಗಳನ್ನು ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ಹೋಬಳಿ ಮಟ್ಟದ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಸರಕಾರಿ ಸೇವೆಗೆ ಸೇರುವುದು ಜನಸಾಮಾನ್ಯರ ಕೆಲಸಗಳನ್ನು ಮಾಡಿಕೊಡುವ ಉದ್ದೇಶದಿಂದ ಎಂಬುದನ್ನು ಅಧಿಕಾರಿಗಳು ಅರಿತುಕೊಳ್ಳಬೇಕು. ಸಭೆಗಳಲ್ಲಿ ಸ್ವೀಕರಿಸುವ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಇತ್ಯರ್ಥಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
43 ಅಹವಾಲುಗಳ ಸ್ವೀಕಾರ
ಸಭೆಯಲ್ಲಿ ವಿವಿಧ ಇಲಾಖೆಗಳ ಸಂಬಂಧ ಸಾರ್ವಜನಿಕರಿಂದ ಒಟ್ಟು 43 ಅಹವಾಲುಗಳು ಸಲ್ಲಿಕೆಯಾಗಿದ್ದವು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ನ ಶೇ. 25ರ ಅನುದಾನದಡಿ ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸವಲತ್ತುಗಳನ್ನು ವಿತರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೊಳ್ಳಿ, ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್., ಉಪ್ಪೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಸುಧೀರ್ ಕುಮಾರ್ ಕೆ., ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಉಪ್ಪೂರು ಗ್ರಾಮ ಪಂಚಾಯತ್ ಪಿಡಿಒ ಸಿದ್ದೇಶ್ ಸ್ವಾಗತಿಸಿದರು. ಬ್ರಹ್ಮಾವರ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಮಹೇಶ್ ನಿರೂಪಿಸಿದರು.






