ಅನಧಿಕೃತ ಡಿಜಿಟಲ್ ಖಾತಾ ವಿತರಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಹಿನ್ನಲೆಯಲ್ಲಿ ಬೀದರ್ ತಾಲ್ಲೂಕಿನ ಚಿಟ್ಟಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಾರೆಡ್ಡಿ ಎಂಬುವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಆದೇಶ ಹೊರಡಿಸಿದ್ದಾರೆ.
“ಸರ್ಕಾರಿ ಜಮೀನಿನಲ್ಲಿ 11-ಬಿ ಖಾತೆಗಳನ್ನು ನೀಡಿ ಸರ್ಕಾರಕ್ಕೆ ಆರ್ಥಿಕ ನಷ್ಟವನ್ನು ಉಂಟು ಮಾಡಿದ ಸದರಿ ಪಿಡಿಒ ಬಗ್ಗೆ ತನಿಖೆ ನಡೆಸಿ ಅಮಾನತು ಮಾಡಬೇಕೆಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಗಸ್ಟ್ 28 ರಂದು ಜರುಗಿದ ಜನಸ್ಪಂದನ ಕಾರ್ಯಕ್ರಮದಲ್ಲಿ ದೂರು ಸಲ್ಲಿಕೆಯಾಗಿತ್ತು. ಸದರಿ ದೂರಿನ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಂಟಿಯಾಗಿ ಅಧಿಕಾರಿಗಳನ್ನು ನೇಮಿಸಿ ಆದೇಶಿಸಲಾಗಿತ್ತು.ಸದರಿ ವಿಷಯದ ಕುರಿತು ಪರಿಶೀಲಿಸಿದ ವರದಿ ಆಧರಿಸಿ ಕ್ರಮ ಜರುಗಿಸಲಾಗಿದೆ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ʼಗಾಂಧಿ ಗ್ರಾಮʼ ಪುರಸ್ಕೃತ ಪಂಚಾಯತಿಯಲ್ಲಿ ಅವ್ಯವಹಾರ; ತನಿಖೆಗೆ ಆಗ್ರಹ
ಕೃಷಿ ಭೂಮಿಯನ್ನು ಸಕ್ಷಮ ಪ್ರಾಧಿಕಾರದಿಂದ ಭೂ ಪರಿವರ್ತನೆ ಮಾಡದೇ ಇರುವುದರಿಂದ ಮತ್ತು ಲೇಔಟ್ ಅನುಮೋದನೆ ಪಡೆಯದೆ ಡಿಜಿಟಲ್ ಖಾತಾಗಳು ವಿತರಣೆ ಮಾಡಿರುವುದರಿಂದ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿರುವುದು ಪರಿಶೀಲನಾ ವರದಿಯಲ್ಲಿ ಮೇಲ್ನೋಟಕ್ಕೆ ಕಂಡು ಬಂದ ಹಿನ್ನಲೆಯಲ್ಲಿ ಅಮಾನುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.