ಉತ್ತರ ಕನ್ನಡ ಜಿಲ್ಲೆಯ ಪ್ರಸಕ್ತ ಸಾಲಿನ ಜಿಲ್ಲಾ ಪಂಚಾಯತ್‌ನ ವಿವಿಧ ಕಾರ್ಯಕ್ರಮಗಳಿಗೆ ರೂ.40,240.75 ಲಕ್ಷ ಹಾಗೂ ತಾಲೂಕು ಪಂಚಾಯತ್‌ನ ವಿವಿಧ ಕಾರ್ಯಕ್ರಮಗಳಿಗೆ ರೂ.94,579.11 ಲಕ್ಷಗಳ ಆಯವ್ಯಯಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಸುಷ್ಮಾ ಗೋಡಬೋಲೆ ಅನುಮೋದನೆ ನೀಡಿದರು.
ಜಿಲ್ಲಾ ಪಂಚಾಯತ್ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಾಮಾನ್ಯ ಸಭೆ ಹಾಗೂ ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಈ ಅನುಮೋದನೆ ನೀಡಿ, ವಿವಿಧ ಇಲಾಖೆಗಳ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕ ಸೇವೆಗಳ ಗುಣಮಟ್ಟ ಸುಧಾರಣೆಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.
ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಪತ್ರಿಕಾ ಪ್ರಕಟಣೆಗಳ ಮೂಲಕ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಬೇಕು. ನಂತರ ಜಿಲ್ಲಾ ಪಂಚಾಯತ್ ಸಮಿತಿ ಸಭೆಯಲ್ಲಿ ನಿಯಮಾವಳಿಗಳ ಅನುಸಾರ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ಸೂಚಿಸಿದ ಅವರು, ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ತಲುಪಿಸಲು ಆಕಾಶವಾಣಿ ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಗಳ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸುದ್ದಿ ಓದಿದ್ದೀರಾ? ಅಂಕೋಲಾ | ನಾಡಬಾಂಬ್ ಪ್ರಕರಣ ಭೇದಿಸಿದ ಪೋಲಿಸರು; ಮೂವರು ಬಂಧನ, ಜೀವಂತ ಬಾಂಬ್ ವಶ
ಶ್ರವಣ ದೋಷ ಹೊಂದಿರುವ ಮಕ್ಕಳಿಗೆ ಸಾಧನಗಳನ್ನು ವಿತರಿಸುವ ಮುನ್ನ ಆಡಿಯೋಗ್ರಾಮ್ ಹಾಗೂ ಆಡಿಯೋಮೆಟ್ರಿ ಪರೀಕ್ಷೆ ನಡೆಸಿ, ಅವರ ಅಗತ್ಯಕ್ಕೆ ಅನುಗುಣವಾಗಿ ಕಸ್ಟಮೈಸ್ ಮಾಡಿದ ಸಾಧನಗಳನ್ನೇ ವಿತರಿಸಬೇಕು ಎಂದು ಸೂಚಿಸಿದರು. ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಕಾರ್ಯನಿರ್ವಹಿಸುತ್ತಿರುವ ವಿಶೇಷ ಶಾಲೆಗಳ ಶಿಕ್ಷಕರ ಗೌರವಧನ ಹಾಗೂ ಇತರ ಪಾವತಿಗಳನ್ನು ಯಾವುದೇ ವಿಳಂಬವಿಲ್ಲದೆ ಪ್ರತಿ ತಿಂಗಳು ನಿಯಮಿತವಾಗಿ ಬಿಡುಗಡೆ ಮಾಡುವಂತೆ ಸಂಬಂಧಿತ ಅಧಿಕಾರಿಗಳಿಗೆ ತಿಳಿಸಿದರು.
ವಸತಿ ಶಾಲೆಗಳಲ್ಲಿ ಆಹಾರದ ಗುಣಮಟ್ಟದ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಶಾಲೆಗಳ ಪ್ರಾಂಶುಪಾಲರು ಹಾಗೂ ವಾರ್ಡನ್‌ಗಳ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಬೇಕು. ಅಲ್ಲದೆ, ಆಹಾರ ತಯಾರಿಕೆ ಹಾಗೂ ವಿತರಣೆಯಲ್ಲಿ ಸ್ವಚ್ಛತೆ ಮತ್ತು ಹೈಜೀನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.
ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಸ್ವಂತ ಕಟ್ಟಡ ಹೊಂದಿರುವ ಅಂಗನವಾಡಿ, ಶಾಲೆ ಹಾಗೂ ವಸತಿ ನಿಲಯಗಳಲ್ಲಿ ನ್ಯೂಟ್ರಿ ಗಾರ್ಡನ್ ಅಭಿವೃದ್ಧಿಪಡಿಸಿ, ಅಲ್ಲೇ ಬೆಳೆಯುವ ತರಕಾರಿಗಳನ್ನು ಮಕ್ಕಳ ಆಹಾರ ತಯಾರಿಕೆಯಲ್ಲಿ ಬಳಸಬೇಕು ಎಂದರು. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಪೌಷ್ಟಿಕ ಪುನರ್ವಸತಿ ಕೇಂದ್ರಗಳಿಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಒದಗಿಸಬೇಕು. ಮಕ್ಕಳ ಪೌಷ್ಟಿಕತೆ ಹಾಗೂ ಅಂಗನವಾಡಿಗಳ ಮೂಲಸೌಕರ್ಯ ಅಭಿವೃದ್ಧಿಗೆ ಬ್ಯಾಂಕುಗಳು ಮತ್ತು ಸ್ಥಳೀಯ ಸಂಸ್ಥೆಗಳ ಸಿಎಸ್‌ಆರ್ ನಿಧಿ ಬಳಸಿಕೊಳ್ಳುವಂತೆ ಯೋಜನೆ ರೂಪಿಸಲು ಸೂಚಿಸಿದರು.
ಸಾಂಪ್ರದಾಯಿಕ ಹೊಲಿಗೆ ಹಾಗೂ ಕರಕುಶಲ ತರಬೇತಿಗಳ ಜೊತೆಗೆ ಯುವಕ-ಯುವತಿಯರ ಬೇಡಿಕೆಗೆ ಅನುಗುಣವಾಗಿ ಜೆರಾಕ್ಸ್ ಶಾಪ್ ನಿರ್ವಹಣೆ, ಹಾಸ್ಪಿಟಾಲಿಟಿ ಹಾಗೂ ಹೋಟೆಲ್ ಮ್ಯಾನೇಜ್ಮೆಂಟ್ ಸೇರಿದಂತೆ ಕೌಶಲ್ಯಾಧಾರಿತ ತರಬೇತಿಗಳನ್ನು ರೂಡ್‌ಸೆಟ್ ಸಂಸ್ಥೆಯ ಸಹಯೋಗದಲ್ಲಿ ನೀಡುವ ಮೂಲಕ ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಪ್ರಸಕ್ತ ಸಾಲಿನ ಕರಡು ಯೋಜನೆಯಲ್ಲಿ ಶಿಕ್ಷಣ, ಗ್ರಾಮೀಣ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಪಶುಸಂಗೋಪನೆ, ವಯಸ್ಕರ ಶಿಕ್ಷಣ, ಕ್ರೀಡೆ ಮತ್ತು ಯುವಜನ ಸೇವೆ, ಗ್ರಾಮೀಣ ಕುಡಿಯುವ ನೀರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪೌಷ್ಟಿಕ ಆಹಾರ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಾಮಾಜಿಕ ಅರಣ್ಯ, ಸಹಕಾರ, ಪ್ರದೇಶಾಭಿವೃದ್ಧಿ, ಪಂಚಾಯತ್ ರಾಜ್ ಸಂಸ್ಥೆಗಳು, ಸಣ್ಣ ನೀರಾವರಿ, ಗ್ರಾಮೋದ್ಯಮ, ರೇಷ್ಮೆ, ಕೈಮಗ್ಗ ಮತ್ತು ಜವಳಿ, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ ವಿವಿಧ ವಲಯಗಳಿಗೆ ಅನುದಾನ ಒದಗಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದೀಲಿಷ್ ಶಶಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ವರ್ಚುವಲ್ ಮೂಲಕ ಭಾಗವಹಿಸಿದ್ದರು.




