ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಲ್ಲಿ ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿರುವ ಮನೆ-ಮನೆ ಸಮೀಕ್ಷೆ ಹಾಗೂ ಎನ್ಯೂಮರೇಷನ್ ಫಾರ್ಮ್ ವಿತರಣೆ ಮತ್ತು ಸಂಗ್ರಹಣೆ ಕಾರ್ಯದ ಯಶಸ್ಸಿಗೆ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮನವಿ ಮಾಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮತದಾರರಿಗೆ ಪೂರ್ವಭರಿತ (Pre-filled) ಎನ್ಯೂಮರೇಷನ್ ಫಾರ್ಮ್‌ಗಳನ್ನು ವಿತರಿಸಲು ಒಂದು ಬಾರಿ ಹಾಗೂ ಭರ್ತಿ ಮಾಡಿದ ಫಾರ್ಮ್‌ಗಳನ್ನು ಸಂಗ್ರಹಿಸಲು ಮೂರು ಬಾರಿ ಮನೆಗಳಿಗೆ ಭೇಟಿ ನೀಡಲಿದ್ದಾರೆ.
ಮತದಾರರು ಫಾರ್ಮ್‌ಗಳನ್ನು ಭರ್ತಿ ಮಾಡಿ ಕಡ್ಡಾಯವಾಗಿ ಬಿಎಲ್‌ಒಗಳಿಗೆ ಹಿಂತಿರುಗಿಸಬೇಕು. ಫಾರ್ಮ್ ಸಲ್ಲಿಸದಿದ್ದಲ್ಲಿ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. ಎನ್ಯೂಮರೇಷನ್ ಫಾರ್ಮ್‌ನ ಪ್ರತಿಗಳಿಗೆ ಮತದಾರರು ಅಥವಾ ಅವರ ಕುಟುಂಬದ ಸದಸ್ಯರು ಹಾಗೂ ಬಿಎಲ್‌ಒ ಸಹಿ ಮಾಡಬೇಕಾಗುತ್ತದೆ. ಜೊತೆಗೆ ಇತ್ತೀಚಿನ ಕಲರ್ ಫೋಟೋ ಸಲ್ಲಿಸಬೇಕು. ಆದರೆ ಫಾರ್ಮ್ ಜೊತೆಗೆ ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ 6,13,031 ಪುರುಷರು, 6,17,001 ಮಹಿಳೆಯರು ಹಾಗೂ 5 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 12,30,037 ಮತದಾರರಿದ್ದಾರೆ. ಮತದಾರರ ವಿವರಗಳ ಪೂರ್ವ ಪರಿಶೀಲನೆ ಕಾರ್ಯದಲ್ಲಿ ಶೇ.93.47ರಷ್ಟು ಮಾಹಿತಿಯನ್ನು ಈಗಾಗಲೇ ಖಚಿತಪಡಿಸಲಾಗಿದೆ. ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕಾಗಿ ಜಿಲ್ಲೆಯಾದ್ಯಂತ 1,445 ಬಿಎಲ್‌ಒಗಳು ಹಾಗೂ 144 ಬಿಎಲ್‌ಒ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಹಾಗೂ ರಾಜಕೀಯ ಪಕ್ಷಗಳು 2,822 ಬೂತ್ ಮಟ್ಟದ ಏಜೆಂಟರನ್ನು ನೇಮಿಸಿವೆ ಎಂದು ಮಾಹಿತಿ ನೀಡಿದರು.
ಈ ಸುದ್ದಿ ಓದಿದ್ದೀರಾ? ಸಚಿವರ ಹೆಜ್ಜೆ ಗುರುತು ಕಾಣದ ಉತ್ತರ ಕನ್ನಡ: ಆಡಳಿತದ ಅಂತರವೇ ಅಭಿವೃದ್ಧಿಗೆ ಅಡ್ಡಿ
ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ವಿಶೇಷ ಜಾಗೃತಿ ವಹಿಸಲಾಗುವುದು. ಸಾರ್ವಜನಿಕರಿಗೆ ಎನ್ಯೂಮರೇಷನ್ ಫಾರ್ಮ್ ಭರ್ತಿ ಸೇರಿದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಯಾವುದೇ ಗೊಂದಲಗಳಿದ್ದರೆ ತಮ್ಮ ಮತಗಟ್ಟೆ ವ್ಯಾಪ್ತಿಯ ಬಿಎಲ್‌ಒಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಕಾರ್ಯಾಗಾರದಲ್ಲಿ ಮಾತನಾಡಿದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಬಿಎಲ್‌ಒಗಳಿಗೆ ಸಮರ್ಪಕ ತರಬೇತಿ ನೀಡುವ ಮೂಲಕ ಸಾರ್ವಜನಿಕರ ಗೊಂದಲಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು. ಅನಕ್ಷರಸ್ಥರು, ಸ್ಲಂ ನಿವಾಸಿಗಳು, ಕಾರ್ಮಿಕರು ಹಾಗೂ ಶೋಷಿತ ವರ್ಗದ ಜನರಿಗೆ ವಿಶೇಷ ಅರಿವು ಮೂಡಿಸಿ, ಅವರ ಹೆಸರುಗಳು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜೇನುನೊಣ ದಾಳಿಗಿಂತ ಭಯಾನಕ ಅವ್ಯವಸ್ಥೆ: ಮೊರಾರ್ಜಿ ವಸತಿ ಶಾಲೆ ವಿರುದ್ಧ ಗಂಭೀರ ಆರೋಪ
ಇದೇ ವೇಳೆ ಕರಡು ಮತದಾರರ ಪಟ್ಟಿ ಪ್ರಕಟಿಸುವ ಸಂದರ್ಭದಲ್ಲಿ ಕುಟುಂಬದ ಎಲ್ಲಾ ಸದಸ್ಯರು ಒಂದೇ ಮತಗಟ್ಟೆಯಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು. ಎನ್ಯೂಮರೇಷನ್ ಫಾರ್ಮ್ ಹಾಗೂ ಇತ್ತೀಚಿನ ಭಾವಚಿತ್ರ ಸಲ್ಲಿಕೆ ಕುರಿತ ಮಾಹಿತಿಯನ್ನು ಸ್ವಚ್ಛತಾ ವಾಹನಗಳು ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ವ್ಯಾಪಕವಾಗಿ ಜನರಿಗೆ ತಲುಪಿಸಬೇಕು ಎಂದು ಪ್ರತಿನಿಧಿಗಳು ತಮ್ಮ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂಜಯ ಸಾಳುಂಕೆ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕೆ. ಶಂಭುಶೆಟ್ಟಿ, ತಾಲೂಕು ಉಪಾಧ್ಯಕ್ಷ ಬಾಬು ಶೇಟ್, ಜೆಡಿಎಸ್ ಅಧ್ಯಕ್ಷ ಸೂರಜ್ ನಾಯ್ಕ ಸೋನಿ, ಸಿಪಿಐ(ಎಂ) ನಾಯಕ ಶ್ಯಾಮ್, ಶಾಂತಾರಾಮ ನಾಯಕ್ ಸೇರಿದಂತೆ ವಿವಿಧ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.




