ರಾಜ್ಯ ಸರ್ಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅಕ್ಟೋಬರ್ 6ರಂದು ಆದೇಶ ಹೊರಡಿಸಿದೆ. ಈ ವರ್ಗಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರನ್ನು ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರಾಗಿ ನೇಮಕ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
ಕೆ. ಲಕ್ಷ್ಮೀಪ್ರಿಯಾ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅವರಿಗೆ ಚುನಾವಣಾ ಕಾರ್ಯ, ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ಹಾಗೂ ಸಮನ್ವಯ ವಿಭಾಗಗಳ ಜವಾಬ್ದಾರಿಯನ್ನು ನೀಡಲಾಗಿದೆ.

ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು
ಇದೇ ವರ್ಗಾವಣೆ ಆದೇಶದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅವರಿಂದ ತೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ ಹುದ್ದೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರಾಗಿದ್ದ ಪ್ರಕಾಶ್ ಜಿ.ಟಿ. ನಿಟ್ಟಲಿ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಎಲ್ಲ ವರ್ಗಾವಣೆಗಳು ತಕ್ಷಣದಿಂದ ಜಾರಿಗೆ ಬರಲಿವೆ.




