ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ದಿಲೀಷ್ ಶಶಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಯಾವುದೇ ಅಂಗನವಾಡಿ, ಶಾಲೆ ಹಾಗೂ ಆಸ್ಪತ್ರೆಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳ ಅಗತ್ಯವಿದ್ದಲ್ಲಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಕಾಮಗಾರಿಗಳನ್ನು ಕ್ರಿಯಾಯೋಜನೆಯಲ್ಲಿ ಸೇರ್ಪಡೆಗೊಳಿಸಿ ಜಿಲ್ಲಾ ಪಂಚಾಯತಿಗೆ ಸಲ್ಲಿಸುವಂತೆ ಸೂಚಿಸಿದರು.
ಈ ಕಾಮಗಾರಿಗಳಿಗೆ ಕೂಡಲೇ ಅನುಮೋದನೆ ನೀಡಲಾಗುವುದು ಎಂದರು.ಬೋರ್‌ವೆಲ್ ಕೊರೆಯುವುದಕ್ಕೆ ಮಾತ್ರ ಸೀಮಿತವಾಗದೆ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿ ಸಾರ್ವಜನಿಕರಿಗೆ ನೀರು ಲಭ್ಯವಾಗುವಂತೆ ಮಾಡಬೇಕು. ಕಾಮಗಾರಿಯ ಸಂಪೂರ್ಣ ವೆಚ್ಚವನ್ನು ಕ್ರಿಯಾಯೋಜನೆಯಲ್ಲಿ ಸೇರಿಸಿ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸುದ್ದಿ ಓದಿದ್ದೀರಾ? ಭಟ್ಕಳ | ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ; ಕಿಂಗ್‌ಪಿನ್‌ಗಳ ಪತ್ತೆ ಎಂದು?
ಪ್ರಸಕ್ತ ವರ್ಷ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿಗಳ ಪಿಡಿಒಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ತಮ್ಮ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಹಾಗೂ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಹರ್ ಘರ್ ಜಲ್ ಹಾಗೂ ಸುಜಲ್ ಗಾವ್ ಯೋಜನೆಯಡಿ ಗ್ರಾಮ ಪಂಚಾಯತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ದತ್ತಾಂಶವನ್ನು ಪೋರ್ಟಲ್‌ನಲ್ಲಿ ನಿಖರವಾಗಿ ದಾಖಲಿಸಬೇಕು. ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವು ಪೋರ್ಟಲ್‌ನಲ್ಲಿನ ಪ್ರಗತಿ ಆಧರಿಸಿ ನಿರ್ಧಾರವಾಗುವುದರಿಂದ ದತ್ತಾಂಶ ದಾಖಲಿಸುವಲ್ಲಿ ಯಾವುದೇ ಲೋಪವಾಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿರುವ ನೀರು ಶುದ್ಧೀಕರಣ ಘಟಕಗಳ ದುರಸ್ತಿಗೆ ಅನುದಾನ ಬಿಡುಗಡೆ ಮಾಡಲಾಗುತ್ತಿದ್ದು, ಅಗತ್ಯವಿರುವ ಕಡೆಗಳಲ್ಲಿ ಯಂತ್ರೋಪಕರಣಗಳನ್ನು ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಲಜೀವನ್ ಮಿಷನ್ ಹಾಗೂ ಹರ್ ಘರ್ ಜಲ್ ಯೋಜನೆಯ ಪ್ರಗತಿ ಕುರಿತು ವಿಸ್ತೃತ ಚರ್ಚೆ ನಡೆಯಿತು. ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕಷ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.




