ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಮತಕ್ಷೇತ್ರಕ್ಕೆ 2026ರಲ್ಲಿ ನಡೆಯಲಿರುವ ಚುನಾವಣೆ ಹಿನ್ನಲೆಯಲ್ಲಿ ಮತದಾರರ ಪಟ್ಟಿ ತಯಾರಿಕಾ ಕಾರ್ಯ ಆರಂಭಗೊಂಡಿದೆ. ಅರ್ಹ ಮತದಾರರು ತಮ್ಮ ಹೆಸರನ್ನು ಸೇರ್ಪಡೆಗೊಳಿಸಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಮತದಾರರ ಪಟ್ಟಿಯನ್ನು ಕ್ರಮಬದ್ಧವಾಗಿ ಮತ್ತು ನ್ಯಾಯಬದ್ಧವಾಗಿ ತಯಾರಿಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು. ಈ ಕುರಿತು ಮಾರ್ಗಸೂಚಿಗಳ ಪ್ರತಿಯನ್ನು ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಹಂಚಲಾಗಿದ್ದು, ಅರ್ಹ ಪದವೀಧರರಲ್ಲಿ ಜಾಗೃತಿ ಮೂಡಿಸಿ ನಿಯಮಾನುಸಾರ ಸೇರ್ಪಡೆ ಮಾಡಿಕೊಳ್ಳಬೇಕು” ಎಂದು ಸೂಚಿಸಿದರು.
“ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅಗತ್ಯವಿರುವ ನಮೂನೆ-18 ಅರ್ಜಿಗಳು ಜಿಲ್ಲೆಯ ಎಲ್ಲಾ ತಹಶೀಲ್ದಾರ ಕಚೇರಿಗಳಲ್ಲಿ ಲಭ್ಯವಿದ್ದು, ಅವುಗಳನ್ನು ಅಗತ್ಯ ದಾಖಲೆಗಳೊಂದಿಗೆ ತಹಶೀಲ್ದಾರ್ ಕಚೇರಿಯಲ್ಲಿ ಸಲ್ಲಿಸಬೇಕು. ಹಾಗೂ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 6 ಆಗಿದ್ದು, ಕರಡು ಮತದಾರರ ಪಟ್ಟಿ ನವೆಂಬರ್ 25ರಂದು ಪ್ರಕಟವಾಗಲಿದೆ. ಆಕ್ಷೇಪಣೆಗಳನ್ನು ಡಿಸೆಂಬರ್ 10ರೊಳಗೆ ಸಲ್ಲಿಸಲು ಅವಕಾಶವಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30ರಂದು ಪ್ರಕಟಿಸಲಾಗುವುದು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ಜಿಲ್ಲಾಡಳಿತ ಸಜ್ಜು; ಡಿಬಿಟಿ ಮೂಲಕ ನಗದು ಜಮಾಕ್ಕೆ ಕ್ರಮ
“ಭಾರತದ ಪ್ರಜೆಯಾಗಿರುವ, ಆಯಾ ಮತಕ್ಷೇತ್ರದೊಳಗಡೆ ಸಾಮಾನ್ಯವಾಗಿ ವಾಸಿಸುತ್ತಿರುವ, ಹಾಗೂ 2025ರ ನವೆಂಬರ್ 1ರೊಳಗೆ ಕನಿಷ್ಠ ಮೂರು ವರ್ಷಗಳ ಹಿಂದೆ ಭಾರತದಲ್ಲಿನ ಯಾವುದಾದರೊಂದು ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವವರು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವವರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅರ್ಹರಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕುಗಳ ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಸಬೇಕು” ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.