ರಾಜ್ಯ ಸರ್ಕಾರವು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಸಚಿವ ಲಕ್ಷ್ಮಣ ಸವದಿ ಅವರನ್ನು ನೇಮಕ ಮಾಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿರುವ ಸರ್ಕಾರ, ಉತ್ತರ ಕನ್ನಡ ಜಿಲ್ಲೆಯ ಜವಾಬ್ದಾರಿಯನ್ನು ಅವರಿಗೆ ವಹಿಸಿದೆ.
ಈ ಬಾರಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಾವುದೇ ಶಾಸಕರಿಗೂ ಸಚಿವ ಸ್ಥಾನ ದೊರೆಯದಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯಲ್ಲಿ ಐವರು ಕಾಂಗ್ರೆಸ್ ಶಾಸಕರಿದ್ದರೂ ಸಚಿವ ಸಂಪುಟದಲ್ಲಿ ಜಿಲ್ಲೆಗೆ ಸೂಕ್ತ ಪ್ರತಿನಿಧಿತ್ವ ಸಿಗದಿರುವುದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ನಿರಾಸೆ ಮೂಡಿಸಿದೆ.
ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಮಾಜಿ ಸಚಿವ ಹಾಗೂ ಭಟ್ಕಳ ಶಾಸಕ ಮಂಕಾಳ ವೈದ್ಯ ಅವರ ಹೆಸರು ಕೊನೆಯ ಕ್ಷಣದವರೆಗೂ ಕೇಳಿಬಂದಿತ್ತು. ಆದರೆ, ಅಂತಿಮ ಪಟ್ಟಿಯಲ್ಲಿ ಅವರ ಹೆಸರು ಕೈಬಿಟ್ಟು ದಾವಣಗೆರೆಯ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಹಳಿಯಾಳ | ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಅಧಿಕಾರಿಗಳಿಗೆ ಶಾಸಕ ಆರ್.ವಿ. ದೇಶಪಾಂಡೆ ಸೂಚನೆ
ಇದರ ಬೆನ್ನಲ್ಲೇ, ರಾಜ್ಯದ ವಿವಿಧ ಭಾಗಗಳಲ್ಲಿ ಒಂದೆಡೆ ಅತಿವೃಷ್ಟಿ ಹಾಗೂ ಮತ್ತೊಂದೆಡೆ ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯ ಜವಾಬ್ದಾರಿಯನ್ನು ಲಕ್ಷ್ಮಣ ಸವದಿ ಅವರಿಗೆ ನೀಡಲಾಗಿದೆ.
ಉಸ್ತುವಾರಿ ಸಚಿವರು ತಕ್ಷಣವೇ ಜಿಲ್ಲೆಗೆ ಭೇಟಿ ನೀಡಿ, ಪ್ರತಿ ತಾಲೂಕಿನಲ್ಲಿನ ಮಳೆಯ ಪ್ರಮಾಣ, ಬೆಳೆ ಹಾನಿ, ಕುಡಿಯುವ ನೀರಿನ ಲಭ್ಯತೆ, ಕೃಷಿ ಚಟುವಟಿಕೆಗಳು, ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಸಿದ್ಧಪಡಿಸುವ ಈ ವರದಿಯನ್ನು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಹಾಗೂ ಬೆಳೆ ಹಾನಿ ಉಂಟಾಗಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ಬರದ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರಿಂದ ಜಿಲ್ಲಾವಾರು ವಾಸ್ತವ ಪರಿಸ್ಥಿತಿಯ ವರದಿ ಪಡೆದು, ಅದರ ಆಧಾರದ ಮೇಲೆ ಅಗತ್ಯ ಪರಿಹಾರ ಕ್ರಮಗಳು, ರೈತರಿಗೆ ನೆರವು ಹಾಗೂ ಇತರೆ ಪರಿಹಾರ ಯೋಜನೆಗಳನ್ನು ಸರ್ಕಾರ ಕೈಗೊಳ್ಳುವ ನಿರೀಕ್ಷೆಯಿದೆ.
ಉತ್ತರ ಕನ್ನಡಕ್ಕೆ ಸಚಿವ ಸ್ಥಾನ ಸಿಗದಿರುವ ನಿರಾಸೆಯ ನಡುವೆಯೇ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಲಕ್ಷ್ಮಣ ಸವದಿ ನೇಮಕಗೊಂಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಅವರು ಯಾವ ರೀತಿಯ ಆದ್ಯತೆ ನೀಡಲಿದ್ದಾರೆ ಎಂಬುದು ಈಗ ತೀವ್ರ ಕುತೂಹಲ ಮೂಡಿಸಿದೆ.




