ಉತ್ತರ ಕನ್ನಡ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಯುವಜನತೆ ತಪ್ಪದೇ ಮತದಾನ ಮಾಡುವ ಮೂಲಕ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಕರೆ ನೀಡಿದರು.
ನಗರದ ಹಿಂದುಳಿದ ವರ್ಗಗಳ ಪೋಸ್ಟ್ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026 (ಎಸ್.ಐ.ಆರ್.) ಅಂಗವಾಗಿ ವಿದ್ಯಾರ್ಥಿಗಳ ಮೂಲಕ ಪೋಷಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಪತ್ರ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ವಾಣಿಜ್ಯ ಉದ್ದೇಶಕ್ಕೆ ಗೃಹಬಳಕೆಯ LPG ಸಿಲಿಂಡರ್ ಬಳಕೆ ನಿಷೇಧ: ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಡಿ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಓ.) ಈಗಾಗಲೇ ಮನೆ-ಮನೆಗೆ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಿದ್ದಾರೆ. ಈ ಫಾರ್ಮ್‌ಗಳನ್ನು ಸರಿಯಾಗಿ ಭರ್ತಿ ಮಾಡಿ, ಸಹಿ ಮಾಡಿ ಕಡ್ಡಾಯವಾಗಿ ಹಿಂದಿರುಗಿಸುವಂತೆ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಪತ್ರ ಬರೆಯಬೇಕು ಎಂದು ತಿಳಿಸಿದರು.
ಎಸ್.ಐ.ಆರ್. ಅಭಿಯಾನದ ಮಹತ್ವವನ್ನು ಪ್ರತಿಯೊಬ್ಬರಿಗೂ ಮನವರಿಕೆ ಮಾಡಿಕೊಡುವ ಅಗತ್ಯವಿದ್ದು, 18 ವರ್ಷ ಪೂರ್ಣಗೊಂಡ ಎಲ್ಲ ಅರ್ಹರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಸಿಕೊಳ್ಳಬೇಕು. ಮತದಾನದ ಹಕ್ಕು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಅತ್ಯಗತ್ಯ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ವಸತಿ ನಿಲಯದ ವಿವಿಧ ಕಾಲೇಜುಗಳ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ತಪ್ಪದೇ ಪಾಲ್ಗೊಳ್ಳುವಂತೆ ತಮ್ಮ ಪೋಷಕರಿಗೆ ಪತ್ರ ಬರೆದು ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು, ವಸತಿ ನಿಲಯದ ವಾರ್ಡನ್ ಹಾಗೂ ಇತರರು ಉಪಸ್ಥಿತರಿದ್ದರು.




