ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 23ರ ಮಧ್ಯಾಹ್ನ 1 ಗಂಟೆಯಿಂದ ಜೂನ್ 27ರ ಬೆಳಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಅವಧಿಯಲ್ಲಿ ಜಿಲ್ಲಾದ್ಯಂತ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕೆ ಹಾಗೂ ಮುಂಗಾರು ಪೂರ್ವ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ಈಗಾಗಲೇ ತೆರೆಯಲಾಗಿದ್ದು, ಸಾರ್ವಜನಿಕರು ಹವಾಮಾನದ 24×7 ವರದಿಗಳಿಗಾಗಿ ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣಗಳು ಹಾಗೂ ಸ್ಥಳೀಯ ಸುದ್ದಿ ಮಾಧ್ಯಮಗಳನ್ನು ಗಮನಿಸಬಹುದು ಎಂದು ತಿಳಿಸಲಾಗಿದೆ. ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಅಡಿಕೆ ಬೆಳೆಗಾರರ ಬದುಕಿನೊಂದಿಗೆ ಚೆಲ್ಲಾಟ ಬೇಡ: ಶಾಸಕ ಶಿವರಾಮ ಹೆಬ್ಬಾರ್
ಸಾರ್ವಜನಿಕರು ಹಾಗೂ ಪ್ರವಾಸಿಗರು ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿ ತೀರ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ನದಿ ಅಥವಾ ಸಮುದ್ರದ ನೀರಿಗೆ ಇಳಿಯುವುದನ್ನು ಕಟ್ಟುನಿಟ್ಟಾಗಿ ತಡೆಯಲಾಗಿದ್ದು, ಪೋಷಕರು ತಮ್ಮ ಮಕ್ಕಳ ಮೇಲೂ ವಿಶೇಷ ನಿಗಾ ವಹಿಸುವಂತೆ ಮನವಿ ಮಾಡಲಾಗಿದೆ. ರೈತರು, ಕಾರ್ಮಿಕರು ಹಾಗೂ ಸಾರ್ವಜನಿಕರು ಮಳೆ ಮತ್ತು ಸಿಡಿಲಿನ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಂದ ದೂರವಿದ್ದು ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು.
ಬಿರುಗಾಳಿ ವೇಳೆ ಅಪಾಯಕಾರಿ ಮರಗಳು ಹಾಗೂ ವಿದ್ಯುತ್ ಕಂಬಗಳ ಸಮೀಪ ನಿಲ್ಲಬಾರದು. ತುಂಡಾದ ವಿದ್ಯುತ್ ತಂತಿಗಳಿಂದ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಶಿಥಿಲಗೊಂಡ ಕಟ್ಟಡಗಳು ಹಾಗೂ ಹಳೆಯ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾರರು ಕಾಲುಸಂಕ ಹಾಗೂ ಕಿರು ಸೇತುವೆಗಳನ್ನು ದಾಟುವ ಮುನ್ನ ನೀರಿನ ಮಟ್ಟವನ್ನು ಪರಿಶೀಲಿಸಿ ಅಗತ್ಯ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.
ಮಳೆಯಿಂದ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವ ತಗ್ಗು ಪ್ರದೇಶಗಳ ನಿವಾಸಿಗಳು ಹಾಗೂ ಶಿಥಿಲಾವಸ್ಥೆಯಲ್ಲಿರುವ ಮನೆ, ಕಂಪೌಂಡ್ ಮತ್ತು ಗೋಡೆಗಳ ಸಮೀಪ ವಾಸಿಸುವವರು ತಕ್ಷಣ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು. ಅಗತ್ಯವಿದ್ದಲ್ಲಿ ತಹಶೀಲ್ದಾರರು ಗುರುತಿಸಿರುವ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ.
ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಅಥವಾ ಅಪಾಯಕಾರಿ ಪರಿಸ್ಥಿತಿ ಕಂಡುಬಂದಲ್ಲಿ ಸಾರ್ವಜನಿಕರು 24×7 ಕಾರ್ಯನಿರ್ವಹಿಸುವ ಜಿಲ್ಲಾ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ 08382-229857, ವಾಟ್ಸಾಪ್ ಸಂಖ್ಯೆ 9483511015 ಅಥವಾ ಸಂಬಂಧಿತ ತಹಶೀಲ್ದಾರ್ ಕಚೇರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.




