ಉತ್ತರ ಕನ್ನಡ: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆಗಳನ್ನು ಆದ್ಯತೆಯ ಮೇರೆಗೆ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಮಿಕರು ಹಾಗೂ ಪೌರಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಗೃಹಭಾಗ್ಯ ಯೋಜನೆಯಡಿ ಈಗಾಗಲೇ ನಿರ್ಮಾಣಗೊಂಡಿರುವ ಮನೆಗಳನ್ನು ತಕ್ಷಣವೇ ಫಲಾನುಭವಿಗಳಿಗೆ ಹಸ್ತಾಂತರಿಸಬೇಕು.
ನಿರ್ಮಾಣ ಹಂತದಲ್ಲಿರುವ ಮನೆಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಹಂಚಿಕೆ ಮಾಡಬೇಕು. ಮನೆಗಳ ನಿರ್ಮಾಣದಲ್ಲಿ ಗುಣಮಟ್ಟ ಕಾಪಾಡಬೇಕು. ನಿರ್ಲಕ್ಷ್ಯ ತೋರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಈಗಾಗಲೇ ನಿರ್ಮಿಸಿರುವ ಮನೆಗಳ ಸುರಕ್ಷತೆ ಹಾಗೂ ಗುಣಮಟ್ಟದ ಕುರಿತು ಪ್ರತ್ಯೇಕ ತನಿಖೆ ನಡೆಸುವಂತೆ ಅವರು ನಿರ್ದೇಶನ ನೀಡಿದರು.
ಪೌರಕಾರ್ಮಿಕರ ಮನೆ ನಿರ್ಮಾಣಕ್ಕೆ ಜಾಗದ ಕೊರತೆಯನ್ನು ನೆಪವಾಗಿಸದೇ ಎಲ್ಲರಿಗೂ ವಸತಿ ಸೌಲಭ್ಯ ಕಲ್ಪಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳ ಬಳಕೆ ಮಾಡಬೇಕು. ಕಾರ್ಮಿಕರಿಗೆ ನಿಯಮಿತ ಆರೋಗ್ಯ ತಪಾಸಣೆ, ದೈನಂದಿನ ಉಪಹಾರ, ಸಂಕಷ್ಟ ಭತ್ಯೆ ಹಾಗೂ ಸುರಕ್ಷತಾ ಉಪಕರಣಗಳನ್ನು ಒದಗಿಸಬೇಕು. ವೇತನವನ್ನು ಸಕಾಲದಲ್ಲಿ ಪಾವತಿಸಿ, ಸ್ಯಾಲರಿ ಸ್ಲಿಪ್ ವಿತರಿಸಬೇಕು. ಗುತ್ತಿಗೆ ಕಾರ್ಮಿಕರಿಗೆ ಇಎಸ್‌ಐ ಮತ್ತು ಪಿಎಫ್ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಬೇಕು. ಈ ವಿಷಯದಲ್ಲಿ ಲೋಪ ಕಂಡುಬಂದರೆ ಸಂಬಂಧಿಸಿದ ಗುತ್ತಿಗೆದಾರರನ್ನು ಬ್ಲಾಕ್‌ಲಿಸ್ಟ್‌ಗೆ ಸೇರಿಸುವಂತೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜೇನುನೊಣ ದಾಳಿಗಿಂತ ಭಯಾನಕ ಅವ್ಯವಸ್ಥೆ: ಮೊರಾರ್ಜಿ ವಸತಿ ಶಾಲೆ ವಿರುದ್ಧ ಗಂಭೀರ ಆರೋಪ
ದಾಂಡೇಲಿ ನಗರಸಭೆ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿಂದ ಪೌರಕಾರ್ಮಿಕರಿಗೆ ಉಪಹಾರ ನೀಡದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಅವರು, ಗುತ್ತಿಗೆದಾರರ ಸಮಸ್ಯೆಯಿಂದ ಕಾರ್ಮಿಕರು ಸಂಕಷ್ಟ ಅನುಭವಿಸಬಾರದು. ತಕ್ಷಣವೇ ಟೆಂಡರ್‌ದಾರರನ್ನು ಬದಲಿಸಿ, ನಾಳೆಯಿಂದಲೇ ಉಪಹಾರ ವಿತರಣೆ ಆರಂಭಿಸಬೇಕು. ಬಾಕಿ ಇರುವ ಎರಡು ತಿಂಗಳ ಭತ್ಯೆಯನ್ನು ನಗದು ರೂಪದಲ್ಲಿ ಕಾರ್ಮಿಕರಿಗೆ ನೀಡುವಂತೆ ನಿರ್ದೇಶನ ನೀಡಿದರು.
ಖಾಯಂ ನೇಮಕಾತಿ ಹೊಂದಿದ ಸಿಬ್ಬಂದಿ ಕಚೇರಿ ಕೆಲಸಕ್ಕೆ ಸೀಮಿತರಾಗುತ್ತಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಕೆಲಸದ ಹಂಚಿಕೆಯಲ್ಲಿ ತಾರತಮ್ಯ ಮಾಡದೇ ಏಕರೂಪದ ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ಹೇಳಿದರು. ಮಳೆಗಾಲಕ್ಕೂ ಮುನ್ನ ರೇನ್‌ಕೋಟ್‌ಗಳನ್ನು ವಿತರಿಸಬೇಕು. ನಿವೃತ್ತಿ ಸೌಲಭ್ಯಗಳಲ್ಲಿ ವಿಳಂಬವಾಗದಂತೆ ದಾಖಲೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಖಾಯಂ ನೇಮಕಾತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಆದ್ಯತೆ ನೀಡುವಂತೆ ಸೂಚಿಸಿದರು.
ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ವಿವಿಧ ನಿಗಮಗಳ ಯೋಜನೆಗಳ ಕುರಿತು ಪೌರಕಾರ್ಮಿಕರಿಗೆ ವ್ಯಾಪಕ ಅರಿವು ಮೂಡಿಸಬೇಕು. ಜಿಲ್ಲೆಗೆ ನಿಗದಿಪಡಿಸಿರುವ ಅನುದಾನ ಮತ್ತು ಗುರಿಯನ್ನು ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ನವೆಂಬರ್ 7ರಂದು ಪೌರಕಾರ್ಮಿಕರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಕಡ್ಡಾಯವಾಗಿ ಆಯೋಜಿಸಬೇಕು ಎಂದರು. ರಾಜ್ಯದ ಪೌರಕಾರ್ಮಿಕರಿಗೆ 1,200 ಚದರ ಅಡಿ ವಿಸ್ತೀರ್ಣದ ಮನೆ ನಿರ್ಮಾಣ, ಉಪಹಾರ ಭತ್ಯೆಯನ್ನು ₹50ಕ್ಕೆ ಹೆಚ್ಚಳ, ಆರೋಗ್ಯ ಕಾರ್ಡ್ ಹಾಗೂ ಸರ್ಕಾರಿ ನೌಕರರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಕುರಿತು ಪೌರಾಡಳಿತ ನಿರ್ದೇಶನಾಲಯಕ್ಕೆ ಆಯೋಗದಿಂದ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಾತನಾಡಿ, ಜಿಲ್ಲೆಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿ ಇಲ್ಲ. ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳನ್ನೇ ಬಳಸಲಾಗುತ್ತಿದೆ. ಪೌರಕಾರ್ಮಿಕರ ಕುಂದುಕೊರತೆಗಳನ್ನು ನಿಯಮಿತ ಸಭೆಗಳ ಮೂಲಕ ಬಗೆಹರಿಸಲಾಗುತ್ತಿದೆ. ಮನೆಗಳ ನಿರ್ಮಾಣ ಮತ್ತು ಹಂಚಿಕೆ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದ್ದು, ಪೂರ್ಣಗೊಂಡ ಮನೆಗಳನ್ನು ಹಸ್ತಾಂತರಿಸಲಾಗುವುದು. ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಲಾಗುವುದು. ಎಲ್ಲಾ ಪೌರಕಾರ್ಮಿಕರಿಗೆ ವಿಮಾ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಪೌರಕಾರ್ಮಿಕರು ಸಂವಾದ ಕಾರ್ಯಕ್ರಮದಲ್ಲಿ ತಮ್ಮ ಅಹವಾಲುಗಳನ್ನು ಹೇಳಿದರು. ಸಭೆಯಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಶಂಕರ್, ಸಂಶೋಧನಾ ಅಧಿಕಾರಿ ಮಹಾದೇವ ಸ್ವಾಮಿ, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ (ಪ್ರಭಾರ) ಸಾಜಿದ್ ಮುಲ್ಲಾ, ಉಪವಿಭಾಗಾಧಿಕಾರಿಗಳಾದ ಚಂದ್ರಶೇಖರ್ ಮತ್ತು ಮಹೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.





