ಉತ್ತರ ಕನ್ನಡ: ಆಗಸ್ಟ್ 2ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ನಡೆಯಲಿರುವ ಪೊಲೀಸ್ ಇಲಾಖೆಯ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕಾರವಾರದ 15 ಹಾಗೂ ಅಂಕೋಲಾದ 5 ಸೇರಿ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 6,475 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಎಲ್ಲ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವೆಬ್ ಕ್ಯಾಸ್ಟಿಂಗ್ ಮೂಲಕ ನಿಗಾ ವ್ಯವಸ್ಥೆ, ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಾಗಾಟಕ್ಕೆ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸುವಂತೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಬನವಾಸಿ | ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಮಹೇಂದ್ರ ಸುಪ್ರೊ ವಾಹನ ಜಪ್ತಿ
ಅಭ್ಯರ್ಥಿಗಳಿಗೆ ಕುಡಿಯುವ ನೀರು ಹಾಗೂ ಶೌಚಾಲಯದ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ದಿನ ಅಭ್ಯರ್ಥಿಗಳಿಗೆ ಬಸ್ ಕೊರತೆಯಾಗದಂತೆ ನೋಡಿಕೊಳ್ಳುವ ಜೊತೆಗೆ ಪರೀಕ್ಷಾ ಕೇಂದ್ರಗಳ ಸಮೀಪ ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಯಂತೆ ಅಭ್ಯರ್ಥಿಗಳ ಡ್ರೆಸ್ ಕೋಡ್ ಹಾಗೂ ನಿಷೇಧಿತ ವಸ್ತುಗಳ ಪರಿಶೀಲನೆ ನಡೆಸಬೇಕು. ಮಹಿಳೆಯರ ತಪಾಸಣೆಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಪರೀಕ್ಷಾ ವೀಕ್ಷಕರು ಹಾಗೂ ಮೇಲ್ವಿಚಾರಕರು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಆರೋಗ್ಯ ಇಲಾಖೆ ವತಿಯಿಂದ ಎಲ್ಲ ಕೇಂದ್ರಗಳಿಗೂ ಸಿಬ್ಬಂದಿ ನಿಯೋಜಿಸುವಂತೆ ಸೂಚಿಸಿದರು.
ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರಿಗೂ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಮಾಧ್ಯಮ ಪ್ರತಿನಿಧಿಗಳಿಗೂ ಕೇಂದ್ರದೊಳಗೆ ಪ್ರವೇಶವಿರುವುದಿಲ್ಲ. ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೂ ಕನಿಷ್ಠ ಎರಡು ಗಂಟೆಗಳ ಮುಂಚಿತವಾಗಿ ಕೇಂದ್ರದಲ್ಲಿ ಹಾಜರಿದ್ದು, ಕಡ್ಡಾಯವಾಗಿ ಗುರುತಿನ ಚೀಟಿ ತರಬೇಕು ಎಂದು ತಿಳಿಸಿದರು.
ಪರೀಕ್ಷೆಯಲ್ಲಿ ಅಕ್ರಮ ತಡೆಗಟ್ಟಲು ಸಿಸಿಟಿವಿ ಕಣ್ಗಾವಲು ಮತ್ತು ಕೃತಕ ಬುದ್ಧಿಮತ್ತೆ (AI) ಆಧಾರಿತ ಮುಖ ಗುರುತಿಸುವಿಕೆ ವ್ಯವಸ್ಥೆ ಅಳವಡಿಸಲಾಗುತ್ತಿದೆ. ಮೊಬೈಲ್ ಫೋನ್, ಬ್ಲೂಟೂತ್, ಇಯರ್‌ಫೋನ್, ಮೈಕ್ರೋಫೋನ್, ಕ್ಯಾಲ್ಕುಲೇಟರ್, ಜ್ಯಾಮಿಟ್ರಿ ಬಾಕ್ಸ್, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ವಾಲೆಟ್, ಹ್ಯಾಂಡ್‌ಬ್ಯಾಗ್, ಬೆಲ್ಟ್, ಕ್ಯಾಪ್, ಗಾಗಲ್ಸ್, ಕೈಗಡಿಯಾರ, ಬಳೆ, ಕ್ಯಾಮೆರಾ, ಮೈಕ್ರೋಚಿಪ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಆಹಾರ ಪದಾರ್ಥ ಮತ್ತು ನೀರಿನ ಬಾಟಲಿ ತರಲು ಅವಕಾಶವಿಲ್ಲ ಎಂದು ತಿಳಿಸಲಾಯಿತು.
ಡ್ರೆಸ್ ಕೋಡ್ ಪ್ರಕಾರ ಪೂರ್ಣ ತೋಳಿನ (ಫುಲ್ ಸ್ಲೀವ್ಸ್) ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ. ಯಾವುದೇ ಲೋಹದ ಆಭರಣ ಧರಿಸಬಾರದು. ಆದರೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ವಿನಾಯಿತಿ ನೀಡಲಾಗಿದೆ. ಜನಿವಾರ ಹಾಗೂ ಶಿವದಾರ ಧರಿಸಲು ಅವಕಾಶವಿದ್ದು, ಬೂಟಿನ ಬದಲು ಚಪ್ಪಲಿ ಅಥವಾ ಸ್ಯಾಂಡಲ್ ಧರಿಸುವಂತೆ ಸೂಚಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಪರೀಕ್ಷೆ ಆರಂಭವಾದ ಬಳಿಕ ಪರೀಕ್ಷಾ ಕೊಠಡಿಗೆ ಪೊಲೀಸ್ ಅಧಿಕಾರಿಗಳಿಗೂ ಪ್ರವೇಶವಿರುವುದಿಲ್ಲ. ಪರೀಕ್ಷೆಯ ಹಿಂದಿನ ದಿನ ಕೇಂದ್ರಗಳಿಗೆ ಬರುವ ಎಲ್ಲಾ ವಾಹನಗಳ ವಿವರ ದಾಖಲಿಸಬೇಕು ಹಾಗೂ ಗುರುತಿನ ಚೀಟಿ ಇಲ್ಲದ ಅನಧಿಕೃತ ವ್ಯಕ್ತಿಗಳ ಪ್ರವೇಶದ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸತೀಶ್ ನಾಯ್ಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಉಪಸ್ಥಿತರಿದ್ದರು.




