ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಪದೇ ಪದೇ ಎದುರಾಗುತ್ತಿರುವ ಗ್ರಾಮಗಳನ್ನು ಗುರುತಿಸಿ, ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯ ಎರಡನೇ ಹಂತದಲ್ಲಿ ಶಾಶ್ವತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಲ ಜೀವನ ಮಿಷನ್ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ. ಬೇಸಿಗೆಯ ಅವಧಿಯಲ್ಲಿ ಜಿಲ್ಲೆಯ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗುತ್ತಿದ್ದು, ಪ್ರಸ್ತುತ ಪಂಚಾಯತ್‌ಗಳ ಮೂಲಕ ಖಾಸಗಿ ಕೊಳವೆಬಾವಿ ಹಾಗೂ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ.
ಈ ತಾತ್ಕಾಲಿಕ ವ್ಯವಸ್ಥೆಯ ಬದಲು ಸುಸ್ಥಿರ ಪರಿಹಾರದತ್ತ ಗಮನಹರಿಸಬೇಕು ಎಂದು ಅವರು ಒತ್ತಿ ಹೇಳಿದರು. ಜೆಜೆಎಂ ಕಾಮಗಾರಿಗಳ ವಿಳಂಬ ಮತ್ತು ಕಳಪೆ ಗುಣಮಟ್ಟದ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿರುವ ಬಗ್ಗೆ ಸಂಸದರು ಅಸಮಾಧಾನ ವ್ಯಕ್ತಪಡಿಸಿದರು.
ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು. ವಿನಾಕಾರಣ ಕೆಲಸ ವಿಳಂಬ ಮಾಡುವ ಗುತ್ತಿಗೆದಾರರಿಗೆ ಕೂಡಲೇ ನೋಟಿಸ್ ಜಾರಿ ಮಾಡಿ, ಅಗತ್ಯ ಬಿದ್ದರೆ ಅಂತಹವರನ್ನು ಕಪ್ಪು ಪಟ್ಟಿಗೆ ಸೇರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಖನಿಜ ಸಂಪತ್ತಿನ ಪತ್ತೆಗೆ ವೈಮಾನಿಕ ಸಮೀಕ್ಷೆ: ಕಡಿಮೆ ಎತ್ತರದಲ್ಲಿ ವಿಮಾನ ಹಾರಾಟ, ಆತಂಕ ಬೇಡ
ಜಿಲ್ಲೆಯಲ್ಲಿ ಜೆಜೆಎಂ ಯೋಜನೆಯಡಿ ಒಟ್ಟು 965 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ ಮೊದಲ ಹಂತದಲ್ಲಿ 256, ಎರಡನೇ ಹಂತದಲ್ಲಿ 228, ಮೂರನೇ ಹಂತದಲ್ಲಿ 26 ಹಾಗೂ ನಾಲ್ಕನೇ ಹಂತದಲ್ಲಿ 232 ಕಾಮಗಾರಿಗಳು ಪೂರ್ಣಗೊಂಡಿವೆ. ಮೊದಲ ಹಂತದಲ್ಲಿ ಕೈಬಿಟ್ಟು ಹೋಗಿದ್ದ 250 ಗ್ರಾಮಗಳಿಗೆ ಎರಡನೇ ಹಂತದಲ್ಲಿ ಯೋಜನೆ ವಿಸ್ತರಿಸಲು ಅನುಮತಿ ದೊರೆತಿದೆ.
ಬಹುಗ್ರಾಮ ಕುಡಿಯುವ ನೀರು ಮತ್ತು ಅಮೃತ ಯೋಜನೆಯ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಜಿಲ್ಲೆಯ ನೀರಿನ ಸಮಸ್ಯೆಯನ್ನು ಸಂಪೂರ್ಣವಾಗಿ ನೀಗಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರು ಸಭೆಗೆ ಮಾಹಿತಿ ನೀಡಿ, ಪ್ರಸ್ತುತ ಹಳಿಯಾಳ ಹಾಗೂ ಮುಂಡಗೋಡ ಭಾಗದಲ್ಲಿ ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಒದಗಿಸಲಾಗುತ್ತಿದೆ. ಅಲ್ಲದೆ 31 ಗ್ರಾಮ ಪಂಚಾಯತ್‌ಗಳ 68 ಕಡೆ ಹಾಗೂ ಮಂಕಿಯ 16 ವಾರ್ಡ್‌ಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ವಿವರಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.




