ಉತ್ತರ ಕನ್ನಡ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜೂನ್ 8ರ ಮಧ್ಯಾಹ್ನ 1 ಗಂಟೆಯಿಂದ ಜೂನ್ 10ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲೆಯಲ್ಲಿ ಮುಂಗಾರು ಪೂರ್ವ ಸಿದ್ಧತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ.
ಸಾರ್ವಜನಿಕರು ಹವಾಮಾನಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣಗಳು ಮತ್ತು ಸ್ಥಳೀಯ ಸುದ್ದಿ ಮಾಧ್ಯಮಗಳ ಮೂಲಕ ಪಡೆಯಬಹುದಾಗಿದೆ. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದ್ದು, ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ಸಾರ್ವಜನಿಕರು, ವಿಶೇಷವಾಗಿ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜೂನ್ 20ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; 12.30 ಲಕ್ಷ ಮತದಾರರ ವಿವರಗಳ ಮರುಪರಿಶೀಲನೆ
ಪ್ರವಾಸಿಗರು ನೀರಿನ ಪ್ರದೇಶಗಳಲ್ಲಿ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ. ಮತ್ತು ರೈತರು ಮಳೆ ಹಾಗೂ ಸಿಡಿಲಿನ ಸಂದರ್ಭಗಳಲ್ಲಿ ಕೃಷಿ ಚಟುವಟಿಕೆಗಳಿಂದ ದೂರವಿರುವಂತೆ. ಮಳೆ, ಗಾಳಿ ಗುಡುಗು-ಸಿಡಿಲಿನ ವೇಳೆ ಸಾರ್ವಜನಿಕರು ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಲು. ಹಾಗೂ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು ಹಾಗೂ ತುಂಡಾದ ವಿದ್ಯುತ್ ತಂತಿಗಳ ಸಮೀಪ ಸುಳಿಯದಂತೆ ಸೂಚನೆ ನೀಡಲಾಗಿದೆ.
ತಗ್ಗು ಪ್ರದೇಶಗಳು ಹಾಗೂ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶಗಳಲ್ಲಿ ವಾಸಿಸುವವರು, ಶಿಥಿಲಾವಸ್ಥೆಯಲ್ಲಿರುವ ಮನೆಗಳು ಅಥವಾ ಗೋಡೆಗಳ ಸಮೀಪ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು. ಅಗತ್ಯವಿದ್ದಲ್ಲಿ ತಹಶೀಲ್ದಾರರು ಗುರುತಿಸಿರುವ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತೆ ಜಿಲ್ಲಾಡಳಿತ ತಿಳಿಸಿದೆ.
ಗ್ರಾಮೀಣ ಪ್ರದೇಶಗಳಲ್ಲಿನ ಕಾಲುಸಂಕ, ಕಿರು ಸೇತುವೆ ಹಾಗೂ ನೀರು ಹರಿಯುವ ಸ್ಥಳಗಳನ್ನು ದಾಟುವಾಗ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಮನೆ, ಗೋಡೆ ಅಥವಾ ಇತರೆ ಅಪಾಯಕಾರಿ ಕಟ್ಟಡಗಳ ಬಗ್ಗೆ ಮಾಹಿತಿ ಇದ್ದಲ್ಲಿ ಜಿಲ್ಲಾಡಳಿತದ 24×7 ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 08382-229857 ಅಥವಾ ವಾಟ್ಸಾಪ್ ಸಂಖ್ಯೆ 9483511015ಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.





