ಉತ್ತರ ಕನ್ನಡ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಮತ್ತು ಸಾರ್ವಜನಿಕರ ದೂರುಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಸೂಚನೆ ನೀಡಿದ್ದಾರೆ.
ಮಂಗಳವಾರ ಕುಮಟಾ ಉಪ ವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜಿಲ್ಲೆಯಲ್ಲಿ ಈ ಬಾರಿ ನೀರಿನ ಅಭಾವ ತೀವ್ರವಾಗಿದ್ದು, ನೀರಿನ ಮೂಲಗಳಿಲ್ಲದ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಅವರು ನಿರ್ದೇಶಿಸಿದರು.
ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವವರಿಗೆ 15 ದಿನಗಳ ಒಳಗಾಗಿ ಹಣ ಪಾವತಿಸುವಂತೆ ಸೂಚಿಸಿದ ಸಚಿವರು, ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯ ಅನುಷ್ಠಾನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಯೊಂದು ಮನೆಯೂ ನಳದ ಸಂಪರ್ಕ ಹೊಂದಿದ್ದರೂ ನೀರು ಒದಗಿಸಲು ಇಲಾಖೆ ವಿಫಲವಾಗಿದೆ.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | 73 ಹೊಸ ನ್ಯಾಯಬೆಲೆ ಅಂಗಡಿಗಳ ಸ್ಥಾಪನೆಗೆ ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆ ಸಲ್ಲಿಕೆ
ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಸುಮಾರು 100 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳು ನಡೆಯುತ್ತಿದ್ದರೂ ಒಂದೂ ಪೂರ್ಣಗೊಳ್ಳದಿರುವುದು ವಿಷಾದನೀಯ ಎಂದು ಅವರು ಹೇಳಿದರು. ಜಿಲ್ಲೆಯ ಪ್ರತಿ ತಾಲೂಕಿಗೆ ಟಾಸ್ಕ್ ಫೋರ್ಸ್ ಅಡಿಯಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ 25 ಲಕ್ಷ ರೂಪಾಯಿ ಅನುದಾನ ಹಂಚಿಕೆಯಾಗಿದೆ.
ಇದರ ಜೊತೆಗೆ ಹೆಚ್ಚುವರಿಯಾಗಿ 3 ಕೋಟಿ ರೂಪಾಯಿ ಅನುದಾನ ಶೀಘ್ರದಲ್ಲೇ ಬರಲಿದ್ದು, ಸರ್ಕಾರದ ಮಟ್ಟದಲ್ಲಿ ಹಣದ ಕೊರತೆಯಿಲ್ಲ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಲಾಗುವುದು, ಆದರೆ ಜನರಿಗೆ ನೀರಿನ ತೊಂದರೆಯಾಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ನೀರಿನ ಸಮಸ್ಯೆಗೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲು ಪ್ರತಿ ತಹಸೀಲ್ದಾರ್ ಮತ್ತು ತಾಲೂಕು ಪಂಚಾಯತ್ ಕಚೇರಿಗಳಲ್ಲಿ ತಕ್ಷಣವೇ ಸಹಾಯವಾಣಿ (Helpline) ಕೇಂದ್ರಗಳನ್ನು ತೆರೆಯಬೇಕು ಎಂದು ಅವರು ಆದೇಶಿಸಿದರು.
ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ತಮ್ಮ ಭಾಗದ ಗಂಭೀರ ಪರಿಸ್ಥಿತಿಯನ್ನು ವಿವರಿಸಿದರು. ಶಿರಸಿ ತಾಲೂಕಿನ 14 ಗ್ರಾಮ ಪಂಚಾಯತ್‌ಗಳು ಹಾಗೂ ಸಿದ್ದಾಪುರ ತಾಲೂಕಿನ 19 ಗ್ರಾಮ ಪಂಚಾಯತ್‌ಗಳಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ಈ ಭಾಗದ ಬಹುತೇಕ ಕೆರೆಗಳು ಬತ್ತಿ ಹೋಗಿರುವುದರಿಂದ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಜೆಜೆಎಂ ಯೋಜನೆಯ ಮೂಲಕವೂ ನೀರು ಸರಬರಾಜು ಆಗುತ್ತಿಲ್ಲ ಎಂದು ಅವರು ಸಭೆಯ ಗಮನಕ್ಕೆ ತಂದರು.
ಸಭೆಯಲ್ಲಿ ಶಾಸಕ ದಿನಕರ ಶೆಟ್ಟಿ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅಪರ ಜಿಲ್ಲಾಧಿಕಾರಿ, ಸಾಜೀದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶ್ರವಣ್ ಕುಮಾರ್ , ಎಲ್ಲಾ ತಹಸೀಲ್ದಾರ್ ಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.




