ಉತ್ತರ ಕನ್ನಡ: ಡಾ. ಬಿ.ಆರ್. ಅಂಬೇಡ್ಕರ್ ಅವರು ಇಡೀ ಮಾನವ ಸಮುದಾಯಕ್ಕೆ ನೀಡಿರುವ ಸಮಾನತೆಯ ಸಂದೇಶವನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಅವರು ತಿಳಿಸಿದರು.
ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾರವಾರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ.
ದೇಶದ ಎಲ್ಲಾ ಸಮುದಾಯಗಳು ಸಮಾನವಾಗಿ ಅಭಿವೃದ್ಧಿ ಹೊಂದಬೇಕೆಂಬ ಆಶಯದೊಂದಿಗೆ ಅಂಬೇಡ್ಕರ್ ಅವರು ಮಹಿಳೆಯರು, ಕಾರ್ಮಿಕರು ಮತ್ತು ಹಿಂದುಳಿದ ವರ್ಗದವರಿಗೆ ಸಂವಿಧಾನದ ಮೂಲಕ ಹಕ್ಕುಗಳನ್ನು ನೀಡಿದ್ದಾರೆ. ಈ ಸಮಾನತೆಯ ತತ್ವವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡು, ತಮಗಿಂತ ಹಿಂದುಳಿದವರ ಏಳಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಡಿಸಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರು ಮಾತನಾಡಿ, ಅಂಬೇಡ್ಕರ್ ಅವರ ‘ಶಿಕ್ಷಣ, ಸಂಘಟನೆ ಮತ್ತು ಹೋರಾಟ’ದ ಸಂದೇಶಗಳು ಅಭಿವೃದ್ಧಿಗೆ ಪೂರಕವಾಗಿವೆ. ಸಂವಿಧಾನ ಪೀಠಿಕೆಯಲ್ಲಿರುವ ಅಂಶಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಸರ್ಕಾರಿ ಅಧಿಕಾರಿಗಳು ಸಂವಿಧಾನಬದ್ಧ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಜಿ.ಪಂ. ಆವರಣದಲ್ಲಿ ಸಂವಿಧಾನ ಪೀಠಿಕೆಯನ್ನು ಉದ್ಘಾಟಿಸಿ ಪುಷ್ಪ ನಮನ ಸಲ್ಲಿಸಿದರು.
ಅಂಕೋಲಾದ ಕೆ.ಎಲ್.ಇ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಮಂಜುನಾಥ ಇಟಗಿ ವಿಶೇಷ ಉಪನ್ಯಾಸ ನೀಡಿ, ಅಂಬೇಡ್ಕರ್ ಅವರು 32 ಪದವಿಗಳನ್ನು ಪಡೆದ ಜ್ಞಾನಿಯಾಗಿದ್ದು, ದೇಶದ ಅರ್ಥವ್ಯವಸ್ಥೆಯನ್ನು ಬಲಪಡಿಸುವಲ್ಲಿ ಅವರ ಪಾತ್ರ ದೊಡ್ಡದು ಎಂದರು.
ಈ ಸುದ್ದಿ ಓದಿದ್ದೀರಾ ? ಶಿರಸಿ | ಪ್ರಗತಿ ಪರಿಶೀಲನಾ ಸಭೆಯಲ್ಲಿ ಗರಂ ಚರ್ಚೆ: ಶಿವರಾಮ ಹೆಬ್ಬಾರ್–ಸುನೀಲ್ ನಾಯ್ಕ ನಡುವೆ ವಾಗ್ವಾದ
ಕಾರ್ಯಕ್ರಮದಲ್ಲಿ ಇತ್ತೀಚೆಗೆ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದ ಜಿಲ್ಲೆಯ ಅಭ್ಯರ್ಥಿಗಳನ್ನು ಹಾಗೂ ವಿವಿಧ ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನವಾಗಿ ಅಳವಡಿಸಲಾದ ಸಂವಿಧಾನ ಪೀಠಿಕೆಯ ಶಿಲಾ ಫಲಕವನ್ನು ಇದೇ ಸಂದರ್ಭದಲ್ಲಿ ಅನಾವರಣಗೊಳಿಸಿ, ಅಧಿಕಾರಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿ.ಪಂ. ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕಷ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ದಲಿತ ಮುಖಂಡರು ಉಪಸ್ಥಿತರಿದ್ದರು.




