ಉತ್ತರ ಕನ್ನಡ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಜೂನ್ 20ರಿಂದ ಆರಂಭವಾಗಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಪ್ರಿ-ಫಿಲ್ಡ್ ಎನ್ಯೂಮರೇಷನ್ ಫಾರ್ಮ್ಗಳನ್ನು ವಿತರಿಸಲಿದ್ದಾರೆ.
ನಿಗದಿತ ಅವಧಿಯಲ್ಲಿ ಈ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಮನವಿ ಮಾಡಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಲ್ಒಗಳು ಪ್ರಿ-ಫಿಲ್ಡ್ ಎನ್ಯೂಮರೇಷನ್ ಫಾರ್ಮ್ಗಳನ್ನು ವಿತರಿಸಲು ಒಂದು ಬಾರಿ ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಸಂಗ್ರಹಿಸಲು ಮೂರು ಬಾರಿ ಮನೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
ಬಿಎಲ್ಒಗಳು ಮನೆಗೆ ಬಂದಾಗ ಮತದಾರರು ಫಾರ್ಮ್ಗಳನ್ನು ಸರಿಯಾಗಿ ಭರ್ತಿ ಮಾಡಿ ಮರಳಿ ನೀಡುವುದು ಕಡ್ಡಾಯವಾಗಿದೆ. ಫಾರ್ಮ್ಗಳನ್ನು ಹಿಂದಿರುಗಿಸದಿದ್ದರೆ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವುದಿಲ್ಲ. ಎರಡು ಪ್ರತಿಗಳಲ್ಲಿ ನೀಡಲಾಗುವ ಎನ್ಯೂಮರೇಷನ್ ಫಾರ್ಮ್ಗಳಲ್ಲಿ ಒಂದನ್ನು ಬಿಎಲ್ಒಗೆ ಸಲ್ಲಿಸಿ, ಮತ್ತೊಂದನ್ನು ಸಾರ್ವಜನಿಕರು ತಮ್ಮ ದಾಖಲೆಗಾಗಿ ಉಳಿಸಿಕೊಳ್ಳಬಹುದು ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಸಚಿವರ ಹೆಜ್ಜೆ ಗುರುತು ಕಾಣದ ಉತ್ತರ ಕನ್ನಡ: ಆಡಳಿತದ ಅಂತರವೇ ಅಭಿವೃದ್ಧಿಗೆ ಅಡ್ಡಿ
ಪ್ರಿ-ಫಿಲ್ಡ್ ಎನ್ಯೂಮರೇಷನ್ ಫಾರ್ಮ್ನಲ್ಲಿ ಮತದಾರರ ಹೆಸರು, ಎಪಿಕ್ ಸಂಖ್ಯೆ, ವಿಳಾಸ, ಭಾಗ ಸಂಖ್ಯೆ, ಕ್ರಮ ಸಂಖ್ಯೆ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಭಾವಚಿತ್ರ ಮುದ್ರಿತವಾಗಿರುತ್ತದೆ. ಎರಡೂ ಪ್ರತಿಗಳಿಗೆ ಬಿಎಲ್ಒ ಮತ್ತು ಮತದಾರರು ಅಥವಾ ಅವರ ಕುಟುಂಬದ ಸದಸ್ಯರು ಕಡ್ಡಾಯವಾಗಿ ಸಹಿ ಮಾಡಬೇಕಾಗುತ್ತದೆ. ಜೊತೆಗೆ ಇತ್ತೀಚಿನ ಬಣ್ಣದ ಭಾವಚಿತ್ರವನ್ನು ನೀಡಬೇಕು. ಆದರೆ ಫಾರ್ಮ್ ಜೊತೆಗೆ ಯಾವುದೇ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ಈ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕಾಗಿ 6 ಮತದಾರರ ನೋಂದಣಾಧಿಕಾರಿಗಳು, 12 ಸಹಾಯಕ ಮತದಾರರ ನೋಂದಣಾಧಿಕಾರಿಗಳು, 1,445 ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಹಾಗೂ 144 ಬಿಎಲ್ಒ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಇದರೊಂದಿಗೆ ಜಿಲ್ಲಾ, ವಿಧಾನಸಭಾ ಕ್ಷೇತ್ರ ಹಾಗೂ ಹೋಬಳಿ ಮಟ್ಟದಲ್ಲೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಇದುವರೆಗೆ 2,822 ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡಿವೆ. ಜಿಲ್ಲೆಯಲ್ಲಿ ಪ್ರಸ್ತುತ 12,30,016 ಮತದಾರರಿದ್ದು, ಮತದಾರರ ವಿವರಗಳ ಪರಿಶೀಲನೆಗಾಗಿ ಕೈಗೊಳ್ಳಲಾಗುತ್ತಿರುವ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಶೇ.93.47ರಷ್ಟು ಪ್ರಗತಿ ಸಾಧಿಸಲಾಗಿದೆ. ವಿಶೇಷ ಸಮಗ್ರ ಪರಿಷ್ಕರಣೆ ಆರಂಭವಾಗುವವರೆಗೂ ಈ ಮ್ಯಾಪಿಂಗ್ ಪ್ರಕ್ರಿಯೆ ಮುಂದುವರಿಯಲಿದೆ ಎಂದರು.
ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 5ರಂದು ಪ್ರಕಟಿಸಲಾಗುವುದು. ಸೆಪ್ಟೆಂಬರ್ 4ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 3ರೊಳಗೆ ಅವುಗಳನ್ನು ವಿಲೇವಾರಿ ಮಾಡಲಾಗುವುದು. ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು. ಭಾರತದ ನಾಗರಿಕರಾಗಿದ್ದು, ಅರ್ಹತಾ ದಿನಾಂಕಕ್ಕೆ 18 ವರ್ಷ ಪೂರ್ಣಗೊಳಿಸಿರುವ ಹಾಗೂ ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹಗೊಳಿಸದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಹರಾಗಿದ್ದಾರೆ. ಯಾವುದೇ ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ವಹಿಸಲಾಗುವುದು ಎಂದರು.
ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಅಥವಾ ಎನ್ಯೂಮರೇಷನ್ ಫಾರ್ಮ್ ಭರ್ತಿ ಕುರಿತು ಸಾರ್ವಜನಿಕರಿಗೆ ಯಾವುದೇ ಗೊಂದಲಗಳಿದ್ದಲ್ಲಿ ತಮ್ಮ ವ್ಯಾಪ್ತಿಯ ಬಿಎಲ್ಒಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.





