ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ 25 ಮತಗಟ್ಟೆಗಳಲ್ಲಿ ಒಟ್ಟು 16,039 ಮತದಾರರು ಮತ ಚಲಾಯಿಸಲಿದ್ದಾರೆ. ಇವರಲ್ಲಿ 8,028 ಪುರುಷರು ಹಾಗೂ 8,011 ಮಹಿಳಾ ಮತದಾರರಿದ್ದಾರೆ.
ಮತದಾನ ಸುಗಮವಾಗಿ ನಡೆಯಲು ಅಗತ್ಯ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು. ಅಕ್ಟೋಬರ್ 21ರಂದು ಸಂಜೆ 4 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಅಕ್ಟೋಬರ್ 22ರಂದು ಜಿಲ್ಲೆಯ ಎಲ್ಲ ತಹಶೀಲ್ದಾರ್ ಕಚೇರಿಗಳಲ್ಲಿ ಮತದಾನಕ್ಕೆ ನಿಯೋಜನೆಗೊಂಡ ಸಿಬ್ಬಂದಿಗೆ ಅಗತ್ಯ ಚುನಾವಣಾ ಸಾಮಗ್ರಿಗಳನ್ನು ವಿತರಿಸಲಾಗುತ್ತದೆ. ಅಕ್ಟೋಬರ್ 23ರಂದು ಬೆಳಗ್ಗೆ 8ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ
ಚುನಾವಣೆಯಲ್ಲಿ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತಗಟ್ಟೆಗಳಲ್ಲಿ 34 ಪಿಆರ್‌ಒಗಳು, 35 ಎಪಿಆರ್‌ಒಗಳು, 62 ಪಿಒಗಳು, 25 ಮೈಕ್ರೋ ವೀಕ್ಷಕರು ಹಾಗೂ 125 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಮತದಾನ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನೂ ಒದಗಿಸಲಾಗುತ್ತದೆ ಎಂದರು.
ಮತದಾನ ಮುಗಿದ ಬಳಿಕ ಮತಪೆಟ್ಟಿಗೆಗಳನ್ನು ಸಂಬಂಧಿಸಿದ ತಹಶೀಲ್ದಾರ್ ಕಚೇರಿಗಳಲ್ಲಿ ಡಿ-ಮಸ್ಟರಿಂಗ್ ಪ್ರಕ್ರಿಯೆ ಪೂರ್ಣಗೊಳಿಸಿ, ಭದ್ರತೆಯೊಂದಿಗೆ ಧಾರವಾಡದ ಮತ ಎಣಿಕೆ ಕೇಂದ್ರಕ್ಕೆ ಸಾಗಿಸಲಾಗುತ್ತದೆ. ಅಕ್ಟೋಬರ್ 27ರಂದು ಬೆಳಗ್ಗೆ 8 ಗಂಟೆಯಿಂದ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಚುನಾವಣಾ ತಹಶೀಲ್ದಾರ್ ಪ್ರಮೋದ್ ನಾಯ್ಕ, ಬಿಜೆಪಿ ಪ್ರತಿನಿಧಿ ಸಂಜಯ್ ಸಾಳುಂಕೆ, ಕಾಂಗ್ರೆಸ್ ಪ್ರತಿನಿಧಿಗಳಾದ ಬಾಬು ಶೇಖ್ ಮತ್ತು ರಮೇಶ್ ಮುದ್ಕೇಕರ್ ಸೇರಿದಂತೆ ಚುನಾವಣಾ ಶಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.





