ಕುಮಟಾ–ಹೊನ್ನಾವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಲಾ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳ ಅಭಿವೃದ್ಧಿಗಾಗಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ (MPLADS) ಅಡಿಯಲ್ಲಿ ಒಟ್ಟು ₹12 ಲಕ್ಷ ಅನುದಾನ ಬಿಡುಗಡೆಗೆ ಶಿಫಾರಸು ಮಾಡಿರುವ ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್ ಅವರಿಗೆ ನಿವೇದಿತ್ ಆಳ್ವಾ ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್ ಅವರು ನವೆಂಬರ್ 12ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಕ್ಷೇತ್ರದ ಮೂರು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡುವಂತೆ ಶಿಫಾರಸು ಮಾಡಿದ್ದಾರೆ.
ಕುಮಟಾ ತಾಲೂಕಿನ ಸಂತೆಗುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉರ್ದು ಪಬ್ಲಿಕ್ ಶಾಲೆಯಲ್ಲಿ ಅಡುಗೆ ಮನೆ ಕಟ್ಟಡ ನಿರ್ಮಾಣಕ್ಕೆ ₹4.50 ಲಕ್ಷ ಅಂದಾಜು ವೆಚ್ಚದ ಕಾಮಗಾರಿಯನ್ನು ಪ್ರಸ್ತಾಪಿಸಲಾಗಿದೆ. ಬಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಬ್ಬಣಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ಮುಂಭಾಗದಲ್ಲಿ ಛಾವಣಿ ನಿರ್ಮಾಣಕ್ಕೆ ₹4 ಲಕ್ಷ ಅನುದಾನ ಶಿಫಾರಸು ಮಾಡಲಾಗಿದೆ.
ಇನ್ನು ಹೊನ್ನಾವರ ತಾಲೂಕಿನ ಚಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಲ್ತಾನ್ ಕೇರಿ ಸುಲ್ತಾನಿ ಮಸೀದಿ ಹಾಗೂ ಮದನ್ ಶಾ ದರ್ಗಾ ಸಮೀಪ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ₹3.50 ಲಕ್ಷ ಅಂದಾಜು ವೆಚ್ಚದ ಕಾಮಗಾರಿಯನ್ನು ಪ್ರಸ್ತಾಪಿಸಲಾಗಿದೆ.
ಈ ಮೂರು ಕಾಮಗಾರಿಗಳ ಒಟ್ಟು ಅಂದಾಜು ವೆಚ್ಚ ₹12 ಲಕ್ಷವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಬಿಡಿಪಿಒ ಅನುಷ್ಠಾನ ಸಂಸ್ಥೆಯ ಮೂಲಕ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ.
ತಮ್ಮ ಮನವಿಗೆ ಸ್ಪಂದಿಸಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸಲು ಶಿಫಾರಸು ಮಾಡಿದ ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್ ಅವರಿಗೆ ನಿವೇದಿತ್ ಆಳ್ವಾ ಧನ್ಯವಾದ ಸಲ್ಲಿಸಿದ್ದಾರೆ. ಅಲ್ಲದೆ, ಈ ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳ್ಳುವಂತೆ ಅಗತ್ಯ ಕ್ರಮ ಕೈಗೊಂಡು ನಿರಂತರವಾಗಿ ಅನುಸರಣೆ ಮಾಡುವುದಾಗಿ ತಿಳಿಸಿದ್ದಾರೆ.



