ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ತಟ್ಟಿಹಕ್ಕಲು ನದಿ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ ವೇಳೆ ದಿಢೀರ್ ನೀರು ಏರಿಕೆಯಾಗಿ ಸಂಭವಿಸಿದ ದುರ್ಘಟನೆಯಲ್ಲಿ ಎಂಟು ಮಂದಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟಿಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ತೆರಳಿದ್ದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆಯ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖ ಉಂಟಾಯಿತು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಸಂತಾಪ ವ್ಯಕ್ತಪಡಿಸಿದ್ದಾರೆ.
“ಇದು ಅತ್ಯಂತ ಹೃದಯವಿದ್ರಾವಕ ಹಾಗೂ ದುರದೃಷ್ಟಕರ ಘಟನೆ. ಅಮೂಲ್ಯ ಜೀವಗಳನ್ನು ಕಳೆದುಕೊಂಡ ಕುಟುಂಬದ ದುಃಖದಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ. ಮೃತರ ಕುಟುಂಬಗಳಿಗೆ ಸರ್ಕಾರ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಲಾಗುವುದು” ಎಂದು ಸಿಎಂ ತಿಳಿಸಿದ್ದಾರೆ.
“ಈ ದುರ್ಘಟನೆಯಲ್ಲಿ ಇನ್ನೂ ಕೆಲವರು ಕಾಣೆಯಾಗಿರುವ ಮಾಹಿತಿ ಲಭ್ಯವಾಗಿದ್ದು, ಅವರನ್ನು ಪತ್ತೆಹಚ್ಚಲು ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಕಾಣೆಯಾದವರು ಸುರಕ್ಷಿತವಾಗಿ ಬದುಕಿ ಬರಲಿ ಮತ್ತು ತಮ್ಮ ಕುಟುಂಬದವರನ್ನು ಸೇರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಅವರು ಬರೆದುಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
— Siddaramaiah (@siddaramaiah) May 24, 2026
ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ…
ಸಚಿವ ಮಂಕಾಳ ವೈದ್ಯ ಸಂತಾಪ: “ಕಪ್ಪೆ ಚಿಪ್ಪು ಮೀನುಗಾರಿಕೆಗೆ ತೆರಳಿದಾಗ ಭಟ್ಕಳ ತಾಲೂಕಿನ ಶಿರಾಲಿಯ ಎಂಟು ಮಂದಿ ನೀರಿನ ಸೆಳತಕ್ಕೆ ಸಿಕ್ಕಿ ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ನಡೆದುಹೋಗಿದೆ. ದೇವರು ಮೃತರ ಕುಟುಂಬದವರಿಗೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲೆಂದು ಕೇಳಿಕೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
“ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು, ಪೊಲೀಸರು ಎಂಟು ಮಂದಿ ಮೃತದೇಹವನ್ನು ಶೋಧ ಮಾಡಿದ್ದು, ಉಳಿದ ಮೂವರಿಗಾಗಿ ಶೋಧನೆ ಮಾಡುತ್ತಿದ್ದಾರೆ. ಆದಷ್ಟು ಶೀಘ್ರವೇ ಮೃತರ ದೇಹವನ್ನು ಹುಡುಕಲಾಗುವುದು” ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.
ಒಟ್ಟು 14 ಜನರ ತಂಡವು ಇಂದು ಕಪ್ಪೆ ಚಿಪ್ಪುಗಳನ್ನು ಸಂಗ್ರಹಿಸಲು ವೆಂಕಟಾಪುರ ನದಿಗೆ ತೆರಳಿತ್ತು. ಈ ವೇಳೆ ನದಿಯಲ್ಲಿ ನೀರಿನ ಮಟ್ಟ ದಿಢೀರನೆ ಏರಿಕೆಯಾದ ಕಾರಣ, ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದರು.
VIDEO | Uttara Kannada: Ten people are feared dead after drowning in the Bhatkal river in Uttara Kannada district. Search and rescue operations are currently underway. pic.twitter.com/XpLV18rQnU
— Press Trust of India (@PTI_News) May 24, 2026
ಮೂವರು ಮಹಿಳೆಯರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು ಮೂವರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿದ್ದೀರಾ? ಉತ್ತರ ಕನ್ನಡ | ಅಳ್ವೇಕೋಡಿ ಕಡಲ ತೀರದಲ್ಲಿ ದಾರುಣ ದುರಂತ: ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ
ಘಟನಾ ಸ್ಥಳಕ್ಕೆ ಭಟ್ಕಳ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಭಟ್ಕಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




