ಉತ್ತರ ಕನ್ನಡ: ಜಿಲ್ಲೆಯಲ್ಲಿ ಮಾಧ್ಯಮಗಳ ಮೂಲಕ ಬೆಳಕಿಗೆ ಬರುವ ಸಾರ್ವಜನಿಕ ಸಮಸ್ಯೆಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಭಾರತ ಸರ್ಕಾರದ ವಾರ್ತಾ ಇಲಾಖೆ ವತಿಯಿಂದ ನಡೆದ ‘ವಾರ್ತಾಲಾಪ’ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಪ್ರಕಟವಾಗುವ ಪ್ರಮುಖ ವರದಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಗಮನಕ್ಕೆ ತರುತ್ತಿದೆ.
ಬಳಿಕ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಿ, ವಾಸ್ತವಾಂಶ ಪರಿಶೀಲಿಸುವಂತೆ ಸೂಚಿಸಲಾಗುತ್ತಿದೆ ಎಂದು ಹೇಳಿದರು. ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಮಸ್ಯೆಯ ನೈಜ ಸ್ಥಿತಿಯನ್ನು ಪರಿಶೀಲಿಸಿದ ನಂತರ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸುತ್ತಾರೆ. ವರದಿಯಲ್ಲಿನ ಅಂಶಗಳ ಆಧಾರದಲ್ಲಿ ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ವಿವರಿಸಿದರು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಹನೂರು ರೈತರ ಎನ್ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಆಗ್ರಹ
ಕಳೆದ ಎರಡು ವರ್ಷಗಳಲ್ಲಿ ಜಿಲ್ಲೆಯಲ್ಲಿ ಮಾಧ್ಯಮಗಳ ಮೂಲಕ ವರದಿಯಾದ ವಿವಿಧ ಸಮಸ್ಯೆ ಹಾಗೂ ಸವಾಲುಗಳ ಮಾಹಿತಿಯನ್ನು ದಾಖಲಿಸಿಕೊಂಡು, ಅವುಗಳ ಕುರಿತು ನಿರಂತರವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಮಾಧ್ಯಮ ವರದಿಗಳನ್ನೂ ಸಾರ್ವಜನಿಕರ ದೂರುಗಳಷ್ಟೇ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಶ್ ಸಸಿ ಮಾತನಾಡಿ, ಮಾಧ್ಯಮಗಳಲ್ಲಿ ಪ್ರಕಟವಾಗುವ ಸಮಸ್ಯೆಗಳ ಕುರಿತು ಸ್ವಯಂಪ್ರೇರಿತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ವರದಿಯ ಆಧಾರದಲ್ಲಿ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಿ, ಅಗತ್ಯವಿದ್ದಲ್ಲಿ ಸಮಸ್ಯೆ ಪರಿಹರಿಸಲಾಗುತ್ತಿದೆ ಎಂದರು. ಮಾಧ್ಯಮ ವರದಿಗಳ ಮೂಲಕ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗಳೂ ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಅಂತಹ ಸಮಸ್ಯೆಗಳಿಗೆ ಪರಿಹಾರ ಒದಗಿಸಿರುವ ಉದಾಹರಣೆಗಳಿವೆ ಎಂದು ಅವರು ಹೇಳಿದರು.
ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಮಾತನಾಡಿ, ಪರಿಶೀಲನೆಯಿಲ್ಲದ ಮಾಹಿತಿ ಮತ್ತು ವದಂತಿಗಳು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸದಂತೆ ಮಾಧ್ಯಮಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿದರು. ಸೈಬರ್ ಅಪರಾಧ ಹಾಗೂ ನಶಾಮುಕ್ತ ಭಾರತ ಅಭಿಯಾನ ಸೇರಿದಂತೆ ಹಲವು ವಿಷಯಗಳ ಕುರಿತು ಪೊಲೀಸರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಾಧ್ಯಮಗಳಲ್ಲಿ ಪ್ರಕಟವಾಗುವ ಪೊಲೀಸ್ ಸಂಬಂಧಿತ ವರದಿಗಳ ಬಗ್ಗೆಯೂ ತಾಲೂಕು ಮಟ್ಟದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಇತ್ತೀಚಿನ ಕಾನೂನು ಬದಲಾವಣೆಗಳ ಕುರಿತು ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳು ತಿಳಿದುಕೊಳ್ಳುವುದು ಅಗತ್ಯ. ಹೊಸ ಕಾನೂನುಗಳ ಪ್ರಮುಖ ಅಂಶಗಳ ಬಗ್ಗೆ ಅರಿವು ಹೊಂದುವ ಮೂಲಕ ಜವಾಬ್ದಾರಿಯುತ ವರದಿಗಾರಿಕೆಗೆ ಆದ್ಯತೆ ನೀಡಬೇಕು ಎಂದು ಅವರು ಕರೆ ನೀಡಿದರು.
ಮಾಧ್ಯಮ ವರದಿಗಳ ಮೂಲಕ ಸಾರ್ವಜನಿಕ ಸಮಸ್ಯೆಗಳು ಆಡಳಿತದ ಗಮನಕ್ಕೆ ಬಂದು, ಅವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಿರುವುದು ಜಿಲ್ಲೆಯಲ್ಲಿ ಮಾಧ್ಯಮ ಮತ್ತು ಆಡಳಿತದ ನಡುವಿನ ಸಮನ್ವಯಕ್ಕೆ ಉತ್ತಮ ಉದಾಹರಣೆಯಾಗಿದೆ.




