ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ನ್ಯಾಯಯುತವಾಗಿ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರ ಸೇವೆಗೆ ಗೌರವ ನೀಡುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರ ಕುಂದುಕೊರತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕಾರ್ಮಿಕ ಇಲಾಖೆಯಿಂದ ನಿಗಧಿಪಡಿಸಿರುವ ವೇತನವನ್ನು ನೀಡಬೇಕು. ಗುತ್ತಿಗೆದಾರರು ಇ.ಎಸ್.ಐ ಹಾಗೂ ಪಿ.ಎಫ್. ಕಡಿತ ಮಾಡುತ್ತಿರುವುದನ್ನು ಅಧಿಕಾರಿಗಳು ಪರಿಶೀಲಿಸಬೇಕು. ಕೆಲಸದ ಅವಧಿಯಲ್ಲಿ ಸೂಕ್ತ ಸುರಕ್ಷತಾ ಉಪಕರಣಗಳನ್ನು ಒದಗಿಸಬೇಕು. ಉತ್ತಮ ಗುಣಮಟ್ಟದ ಬೆಳಗಿನ ಉಪಹಾರ ನೀಡಬೇಕು. ಕೆಲಸದ ನಂತರ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಸೌಲಭ್ಯ ಕಲ್ಪಿಸಬೇಕು. ನಿಯಮಿತ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್ ಹೆಲ್ತ್ ಚೆಕ್‌ಅಪ್‌ಗಳನ್ನು ನಡೆಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ಸಫಾಯಿ ಕರ್ಮಚಾರಿಗಳಿಗೆ ಗೃಹಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸುವ ಕೆಲಸವನ್ನು ಆದ್ಯತೆಯಲ್ಲಿ ಕೈಗೊಳ್ಳಬೇಕು. ಈಗಾಗಲೇ ನಿರ್ಮಾಣ ಪೂರ್ಣಗೊಂಡ ಮನೆಗಳನ್ನು ತಕ್ಷಣ ಹಸ್ತಾಂತರಿಸಬೇಕು. ಜಿಲ್ಲೆಯ ಯಾವ ಭಾಗದಲ್ಲೂ ಮ್ಯಾನ್ಯುಯಲ್ ಸ್ಕಾವೆಂಜಿಂಗ್ ಪದ್ಧತಿ ನಡೆಯದಂತೆ ಎಚ್ಚರವಹಿಸಬೇಕು. ಈ ಅನಿಷ್ಠ ಪದ್ಧತಿ ಕುರಿತು ಹೆಚ್ಚು ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಡ್ಡಾಯವಾಗಿ ಸಕ್ಕಿಂಗ್ ಯಂತ್ರಗಳ ಮೂಲಕವೇ ಶೌಚಗುಂಡಿಗಳ ಸ್ವಚ್ಛತೆ ಮಾಡಿಸಬೇಕು ಎಂದು ಸೂಚಿಸಿದರು.
ಸಫಾಯಿ ಕರ್ಮಚಾರಿಗಳ ಮೇಲೆ ಗುತ್ತಿಗೆದಾರರಿಂದ ಯಾವುದೇ ರೀತಿಯ ಶೋಷಣೆ ನಡೆಯದಂತೆ ಅಧಿಕಾರಿಗಳು ನಿಗಾವಹಿಸಬೇಕು. ವಾರದ ರಜೆ ಸೇರಿದಂತೆ ಅಗತ್ಯ ರಜೆಯನ್ನು ಅವರಿಗೆ ನೀಡಬೇಕು ಹಾಗೂ ರಜಾ ಅವಧಿಯಲ್ಲಿ ವೇತನವನ್ನು ಕಡಿತಗೊಳಿಸಬಾರದು. ಪ್ರತೀ ತಿಂಗಳು ಅವರಿಗೆ ವೇತನ ಚೀಟಿಯನ್ನು ವಿತರಿಸಬೇಕು ಎಂದು ಅವರು ಹೇಳಿದರು.ಇದೇ ಸಂದರ್ಭದಲ್ಲಿ, ಮೋರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಸಫಾಯಿ ಕರ್ಮಚಾರಿಗಳ ಮಕ್ಕಳ ದಾಖಲಾತಿಗೆ ವಿಶೇಷ ಮೀಸಲಾತಿ ಸೌಲಭ್ಯವಿದ್ದು, ಮಕ್ಕಳನ್ನು ಇಂತಹ ಶಾಲೆಗಳಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಅಧಿಕಾರಿಗಳು ಪೋಷಕರಿಗೆ ಮಾಹಿತಿ ನೀಡಬೇಕು. ಇದರಿಂದ ಮಕ್ಕಳಿಗೆ ಅತ್ಯುತ್ತಮ ಶೈಕ್ಷಣಿಕ ಸೌಲಭ್ಯ ದೊರಕುತ್ತದೆ ಎಂದು ಆಯೋಗದ ಸಂಶೋಧನಾ ಅಧಿಕಾರಿ ಮಹಾದೇವ ಸ್ವಾಮಿ ಹೇಳಿದರು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಕ್ರಮ ಬಡ್ಡಿ ದಂಧೆ ನಿಯಂತ್ರಣ, ಬ್ಯಾಂಕ್‌ಗಳಲ್ಲಿ ಭದ್ರತೆ ಹೆಚ್ಚಿಸಲು ಎಸ್‌ಪಿ ಸೂಚನೆ
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ನಗರಸಭೆ ಪೌರಾಯುಕ್ತ ಜಗದೀಶ್ ಹುಲಿಗೆಜ್ಜಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಮೇಶ್ ಸೇರಿದಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.