ಲಾರಿ ಪಲ್ಟಿಯಾಗಿ 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಈದಿನ ಡಾಟ್ ಕಾಮ್‌ಗೆ ತಿಳಿಸಿದ್ದಾರೆ.
ಸವಣೂರು ತಾಲೂಕಿನ 20ಕ್ಕೂ ಹೆಚ್ಚು ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಪರಿಣಾಮ 8 ಮಂದಿ ವ್ಯಾಪಾರಿಗಳು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ. ಅಲ್ಲದೆ, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಜನರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಘಟನೆ ವೇಳೆ ಲಾರಿಯಲ್ಲಿ ಒಟ್ಟು 28 ಮಂದಿ ವ್ಯಾಪಾರಿಗಳು ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿ ವೇಳೆ ತಿಳಿದು ಬಂದಿದೆ. ಲಾರಿಯು ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈದಿನ ಡಾಟ್ ಕಾಮ್‌ಗೆ ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಎಸ್‌ಪಿ ನಾರಾಯಣ್ ಹಾಗೂ ಹಾಗೂ ಇತರೆ ಪೊಲೀಸರು, ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಣಿವೆಗೆ ಬಿದ್ದಿರುವ ಲಾರಿಯನ್ನು ಮೇಲೆತ್ತಲು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಲಾಗುತ್ತಿದೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
