ಉತ್ತರ ಕನ್ನಡ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಸಾಲ ಮತ್ತು ಠೇವಣಿ ಅನುಪಾತವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲಾ ಬ್ಯಾಂಕ್‌ಗಳಿಗೆ ನಿಗದಿತ ಗುರಿ ನೀಡುವುದರ ಜೊತೆಗೆ, ಗುರಿ ಸಾಧಿಸಲು ಪ್ರತ್ಯೇಕ ಕ್ರಿಯಾ ಯೋಜನೆ ರೂಪಿಸುವಂತೆ ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಅಗ್ರಣಿ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳು ಸಾಲ ಮತ್ತು ಠೇವಣಿ ಅನುಪಾತದಲ್ಲಿ ನಿಗದಿತ ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು. ವಿವಿಧ ಸರ್ಕಾರಿ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ,
ಅರ್ಹ ಫಲಾನುಭವಿಗಳಿಗೆ ಆದ್ಯತೆಯ ಮೇರೆಗೆ ಸಾಲ ಮಂಜೂರು ಹಾಗೂ ವಿತರಣೆ ಮಾಡುವ ಮೂಲಕ ಸಾಲ-ಠೇವಣಿ ಅನುಪಾತವನ್ನು ಸುಧಾರಿಸಬೇಕು ಎಂದು ಅವರು ಸೂಚಿಸಿದರು. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಫಲಾನುಭವಿಗಳು ಸಲ್ಲಿಸಬೇಕಾದ ಅರ್ಜಿಗಳು ಬ್ಯಾಂಕ್‌ಗಳಿಗೆ ತಲುಪದೆ ಬಾಕಿ ಉಳಿದಿದ್ದರೆ, ಅಂತಹ ಅರ್ಜಿಗಳನ್ನು ಕೂಡಲೇ ಬ್ಯಾಂಕ್‌ಗಳಿಗೆ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸುದ್ದಿ ಓದಿದ್ದೀರಾ? ಕುಮಟಾ | ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಸರ್ಕಾರಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢಗೊಳಿಸುವುದು ಯೋಜನೆಗಳ ಅನುಷ್ಠಾನ ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಜೂನ್ 2026ರ ತ್ರೈಮಾಸಿಕ ಅಂತ್ಯಕ್ಕೆ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಒಟ್ಟು ₹27,262 ಕೋಟಿ ಠೇವಣಿ ಸಂಗ್ರಹವಾಗಿದ್ದು, ₹12,778 ಕೋಟಿ ಸಾಲ ವಿತರಿಸಲಾಗಿದೆ. ಇದರಿಂದ ಜಿಲ್ಲೆಯ ಒಟ್ಟಾರೆ ಸಾಲ ಮತ್ತು ಠೇವಣಿ ಅನುಪಾತವು ಶೇ.46.87ರಷ್ಟಿದೆ. ಪ್ರಸಕ್ತ ವರ್ಷದಲ್ಲಿ ಈ ಅನುಪಾತವನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಪ್ರತಿಯೊಂದು ಬ್ಯಾಂಕ್ ಪ್ರತ್ಯೇಕ ಕ್ರಿಯಾ ಯೋಜನೆ ರೂಪಿಸಿ ನಿಗದಿತ ಗುರಿ ಸಾಧಿಸಬೇಕು ಎಂದು ಸಿಇಒ ಡಾ. ದಿಲೀಪ್ ಶಶಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕರೀಂ ಅಸಾದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಕೆನರಾ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ನಾಗರಾಜ್, ನಬಾರ್ಡ್ ವ್ಯವಸ್ಥಾಪಕ ಸುಶೀಲ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಜಪ್ಪ, ಲೀಡ್ ಜಿಲ್ಲಾ ಅಧಿಕಾರಿ ಮೋನಿರಾಜ್ ಬ್ರಹ್ಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳ ಅಧಿಕಾರಿಗಳು ಉಪಸ್ಥಿತರಿದ್ದರು.





