ಉತ್ತರ ಕನ್ನಡ: ಜಿಲ್ಲೆಯಲ್ಲಿ ವಿವಿಧ ಯೋಜನೆಗಳಡಿ ನಿರ್ಮಾಣಗೊಳ್ಳುತ್ತಿರುವ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಪ್ರಗತಿಯಲ್ಲಿರುವ 91 ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು.
ಈ ಕುರಿತು ಸಂಬಂಧಪಟ್ಟ ಕಾಮಗಾರಿ ನಿರ್ಮಾಣ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳು ಲಭ್ಯವಿರುವ ಬಗ್ಗೆ ಪರಿಶೀಲನೆ ನಡೆಸಬೇಕು.
ಈ ಸುದ್ದಿ ಓದಿದ್ದೀರಾ? ಅಂಕೋಲಾ | ಕಸ್ತೂರಿ ರಂಗನ್ ವರದಿ ಪುನರ್ ಪರಿಶೀಲನೆಗೆ ಆಗ್ರಹ
ದುರಸ್ತಿ ಅಗತ್ಯವಿರುವ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ನಿವೇಶನದ ಅವಶ್ಯಕತೆ ಇರುವ ಸ್ಥಳಗಳಲ್ಲಿ ನಿವೇಶನ ಒದಗಿಸುವ ನಿಟ್ಟಿನಲ್ಲಿ ಸ್ಥಳೀಯ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ನಟರಾಜ್ ಹಾಗೂ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.





