ಹೊಸಪೇಟೆಯ ವಿಜಯನಗರ ಕಾಲೇಜು ಮೈದಾನದಲ್ಲಿ ಮೇ 20ರಂದು ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.
ಹೊಸಪೇಟೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ ಝಡ್ ಜಮೀರ್ ಅಹ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ನಂತರ ಅವರು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದರು.
“ಕರ್ನಾಟಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ಜನರೊಂದಿಗೆ ಸಂವಾದ ಏರ್ಪಡಿಸುವ ನಿಟ್ಟಿನಲ್ಲಿ ಈ ಸಮಾವೇಶ ಏರ್ಪಡಿಸಲಾಗಿದೆ. ಸಾಧನಾ ಸಮಾವೇಶ ಯಶಸ್ವಿಗೊಳಿಸಲು ಬೇಕಾಗುವ ಎಲ್ಲ ಸಹಕಾರವನ್ನು ನೀಡಲಾಗುವುದು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಮನರೇಗಾ ಕಾರ್ಮಿಕರಿಗೆ ಎರಡು ವರ್ಷಗಳಿಂದ ಕೂಲಿ ನೀಡಿಲ್ಲ: ಶಾಂತಮ್ಮ ಅರೋಪ
“ಮೇ 20ರಂದು ನಡೆಯಲಿರುವ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವ ಸಂಪುಟದ ಎಲ್ಲ ಸಚಿವರು ಕಲ್ಯಾಣ ಕರ್ನಾಟಕದ ಎಲ್ಲ ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ ವಿವಿಧ ಜಿಲ್ಲೆಗಳಿಂದ ಅಂದಾಜು 2 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ” ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಸಂಸದ ತುಕಾರಾಂ, ಬಳ್ಳಾರಿ ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ದಿವಾಕರ್, ಶಾಸಕರಾದ ಜೆ ಎನ್ ಗಣೇಶ್, ಗವಿಯಪ್ಪ, ಮಾಜಿ ಶಾಸಕ ಭೀಮಾ ನಾಯ್ಕ್ ಹಾಗೂ ಇತರರು ಇದ್ದರು.