ಹಿರೇಹಡಗಲಿ-ಇಟ್ಟಿಗಿ ರಸ್ತೆಯ ಡಾಂಬರೀಕರಣಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಭಗತ್ ಸಿಂಗ್ ಯುವ ವೇದಿಕೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಂಘಟನೆಯ ಮುಖಂಡರು ಮಾತನಾಡಿ, “ವಿಜಯನಗರ ಜಿಲ್ಲೆಯ ಹಿರೇಹಡಗಲಿ-ಇಟ್ಟಿಗಿ ಪ್ರಮುಖ ರಸ್ತೆಯ ಮ್ಯಾನಿಂಗ್ ಹಾಗೂ ಡಾಂಬರೀಕರಣ ಕೆಲಸವು ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದೆ. ತಕ್ಷಣವೇ ಗುಣಮಟ್ಟದ ಡಾಂಬರೀಕರಣ ಕಾರ್ಯವನ್ನು ಪ್ರಾರಂಭಿಸಬೇಕು” ಎಂದು ಆಗ್ರಹಿಸಿದರು.
ಅಡವಿಮಲ್ಲಿಕೇರಿ-ತಳಕಲ್ಲು ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟಿದೆ. ಬೃಹತ್ ಗಾತ್ರದ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
“ಲೋಕೋಪಯೋಗಿ ಇಲಾಖೆ ಅಥವಾ ಸಂಬಂಧಪಟ್ಟ ಪಂಚಾಯತ್ ಅಧಿಕಾರಿಗಳು ಈ ರಸ್ತೆಗಳ ತುರ್ತು ದುರಸ್ತಿ ಮತ್ತು ನವೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು” ಎಂದು ಧರಣಿನಿರತರು ಒತ್ತಾಯಿಸಿದರು.
ರಸ್ತೆಗಳು ಕಳಪೆ ಸ್ಥಿತಿಯಲ್ಲಿರುವುದರಿಂದ ರಾತ್ರಿ ವೇಳೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ವಾಹನ ಸವಾರರ ಪ್ರಾಣಕ್ಕೆ ಭೀತಿ ಎದುರಾಗಿದೆ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
“ರಸ್ತೆ ಕಾಮಗಾರಿಗೆ ಅನುದಾನ ಮತ್ತು ಗುತ್ತಿಗೆ ಪ್ರಕ್ರಿಯೆಗಳು ಪೂರ್ಣಗೊಂಡಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ತಳಮಟ್ಟದಲ್ಲಿ ಯಾವುದೇ ಕೆಲಸ ಆರಂಭವಾಗಿಲ್ಲ” ಎಂದು ಆರೋಪಿಸಿದರು.
ತಕ್ಷಣವೇ ಕಾಮಗಾರಿ ಆರಂಭಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.
ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದ ತಾಲೂಕು ಅಧಿಕಾರಿ ಪ್ರವೀಣ್ ಕುಮಾರ್ ಅವರು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.
ಈ ಜಂಟಿ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು, ಭಗತ್ ಸಿಂಗ್ ಯುವ ವೇದಿಕೆಯ ಕಾರ್ಯಕರ್ತರು, ರಹಮತ್ ಬೀರಬ್ಬಿ, ಮಲ್ಲಿಕಾರ್ಜುನ್ ಮುಜ್ಜು, ರೈಮಾನ್, ಶಿವರಾಜ ಎಂ. ಹೊಳಗುಂದಿ, ಗಿರೀಶ್ ಕೆ.ಕೆ., ತಾಂಡ್ ಸೇರಿದಂತೆ ವಿವಿಧ ಗ್ರಾಮಗಳ ಜನರು ಭಾಗವಹಿಸಿದ್ದರು.




