ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಕೂಡಲೇ ಸರ್ಕಾರ ರಾಜ್ಯದ ಎಲ್ಲಾ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಕ್ರಮವಹಿಸಬೇಕೆಂದು AIDSO ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಆಗ್ರಹಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪದವಿ ವಿದ್ಯಾರ್ಥಿಗಳು ಸೇರಿ AIDSO ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
“ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್ ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸುವುದು ಕಡ್ಡಾಯವಲ್ಲ ಎಂದು ಸರ್ವೋಚ್ಛನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕು” ಎಂದು AIDSO ಸಂಘಟನೆಯ ಮುಖಂಡರು ಒತ್ತಾಯಿಸಿದರು.
ಇದನ್ನೂ ಓದಿ: ವಿಜಯಪುರ | ಮಹಿಳಾ ಸಬಲೀಕರಣದತ್ತ ʼಒಡಲ ಧ್ವನಿ ಒಕ್ಕೂಟʼದ ಹೆಜ್ಜೆ; ರೈತರಿಗೆ ಕೃಷಿ ಪರಿಕರ ವಿತರಣೆ
ಈ ಪ್ರತಿಭಟನೆಯಲ್ಲಿ ಶಂಕರ್ ಕಾಂಬಳೆ, ಶಂಕರ್, ಕಿರಣ ರಾಠೋಡ, ಸೊಹೆಲ್, ಮೊಹಮದ್ ಜುಬೇರ್, ಸಿದ್ರಾಮ ಜೋಗಿ, ಮೊಹಮದ್ ಬಾಗವಾನ, ಖಾದೀರ್ ಮಾಶ್ಯಾಳ, ವಿಶ್ವಾ ಉಕ್ಕಲಿ, ಗೋಪಾಲ ಹಾದಿಮನಿ, ಗಣೇಶ ಡೆಗಿನಾಳ ಹಾಗೂ ಇನ್ನಿತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.