ವಿಜಯಪುರ ಜಿಲ್ಲೆಯ ಕರ್ನಾಟಕ ಒನ್, ಸಿಎಸ್‌ಸಿ, ಗ್ರಾಮ ಒನ್ ಸೇರಿದಂತೆ ವಿವಿಧ ಸರ್ಕಾರಿ ಸೇವಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದ್ದು, ಈ ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳುವಂತೆ ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ ಅಪರಾ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.
ದೂರಿನಲ್ಲಿ, ಜಾತಿ, ಆದಾಯ, ನಿವಾಸ ಪ್ರಮಾಣಪತ್ರಗಳ ವಿತರಣೆಯಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಹೆಚ್ಚುವರಿ ಶುಲ್ಕ ವಸೂಲಿ ಹಾಗೂ ದಾಖಲೆಗಳ ವಿಳಂಬದಿಂದ ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗ, ವಿದ್ಯಾರ್ಥಿವೇತನ ಮತ್ತು ಇತರೆ ಸೌಲಭ್ಯಗಳಿಗಾಗಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸೇವಾ ಕೇಂದ್ರಗಳ ಮೇಲೆ ವಿಶೇಷ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ದಾಖಲೆಗಳನ್ನು ನಿಗದಿತ ಅವಧಿಯಲ್ಲಿ ವಿತರಿಸಲು ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಬೇಡಿಕೆ ಈಡೇರದಿದ್ದರೆ ವಿದ್ಯಾರ್ಥಿಗಳನ್ನು ಸಂಘಟಿಸಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.




