ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಾದ ಅತಿಹೆಚ್ಚು ಮಳೆ ಪ್ರದೇಶಗಳ ಪೈಕಿ ವಿಜಯಪುರ ಜಿಲ್ಲೆಯಾಗಿದೆ. ಹಾಗಾಗಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿದ ಅವರು, “ಜಿಲ್ಲೆಯಲ್ಲಿ ಮುಂಗಾರು ಅಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮೂಲ ಸೌಕರ್ಯಗಳಾದ ರಸ್ತೆ, ಶಾಲಾ ಕಟ್ಟಡ, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಹಾನಿಗೀಡಾದ ಪ್ರದೇಶಗಳಿಗೆ ಅಧಿಕಾರಿಗಳು ತೆರಳಿ ಪ್ರಥಮ ಆದ್ಯತೆ ನೀಡಿ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು” ಎಂದರು.
“ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಹಾನಿಗೀಡಾದವರಿಗೆ ಮೂಲಸೌಕರ್ಯ ಒದಗಿಸಲು ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರವಾಹದಿಂದ ತೊಂದರೆಗೊಳಗಾದ ಗ್ರಾಮಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಅಂದಾಜು 2.45 ಲಕ್ಷ ಹೆಕ್ಟೇರ್ ಬೆಳೆಹಾನಿ ಅಂದಾಜಿಸಲಾಗಿದೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಮೀಕ್ಷೆ ಕೈಗೊಂಡು ನಿಖರವಾದ ಬೆಳೆ ಹಾನಿಯ ಮಾಹಿತಿ ನೀಡಬೇಕು” ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಉಡುಪಿ | ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ ; ಕೋಟ್ಯಂತರ ರೂ. ನಷ್ಟ
ಜಿಲ್ಲೆಯ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ನಗರಗಳಲ್ಲಿ ಮಳೆಯಿಂದ ಹಾನಿಯಾದ ಮನೆಗಳ ಸಮೀಕ್ಷೆ ಕಾರ್ಯ ಕೈಗೊಂಡು 30ಕ್ಕೂ ಹೆಚ್ಚು ಪ್ರತಿಶತ ಹಾನಿಗೊಳಗಾದ ಮನೆಗಳನ್ನು ಗುರುತಿಸಿ, ಜಿಪಿಎಸ್ ಫೋಟೋ ಸಹಿತ ನಿಖರವಾದ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು” ಎಂದು ಸೂಚಿಸಿದರು.
ಹಾನಿಗೀಡಾದ ಕಟ್ಟಡಗಳ ಸಮೀಕ್ಷೆ ಕಾರ್ಯ ಕೈಗೊಂಡು ಜಿಪಿಎಸ್ ಫೋಟೋ ಸಮೇತ ವರದಿ ಸಲ್ಲಿಸಬೇಕು. ಚೆಕ್ ಡ್ಯಾಮ್ ಗಳ ಸಣ್ಣ ಸಣ್ಣ ಬಾಂಧಾರಗಳು, ಕೆರೆ ಕಟ್ಟೆಗಳ ದುರಸ್ತಿಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು.