ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ತನ್ನ 16ನೇ ಘಟಿಕೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮೂವರು ಮಹಿಳಾ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.

ಕಲಾಕ್ಷೇತ್ರದ ಸಾಧನೆಗಾಗಿ ಶಿಗ್ಗಾಂವಿಯ ಗೋಟಗೋಡಿ ರಾಕ್‌ಗಾರ್ಡನ್‌ನ ವೇದರಾಣಿ ದಾಸನೂರು, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕಲಬುರಗಿಯ ವಿಶ್ರಾಂತ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಬಾಳಿ ಮತ್ತು ಸಿನಿಮಾ ರಂಗದ ಸಾಧನೆಗಾಗಿ ಖ್ಯಾತ ನಟಿ ತಾರಾ ಅವರಿಗೆ ವಿವಿ ಕುಲಪತಿ ಪ್ರೊ. ಬಿ ಕೆ ತುಳಸಿಮಾಲ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ ಒಟ್ಟು 63 ವಿದ್ಯಾರ್ಥಿನಿಯರಿಗೆ 80 ಚಿನ್ನದ ಪದಕಗಳನ್ನು ಮತ್ತು 34 ವಿದ್ಯಾರ್ಥಿನಿಯರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪರಿಶಿಷ್ಟ ಜಾತಿಯವರ ಮೇಲೆ ಸುಳ್ಳು ಪ್ರಕರಣ ದಾಖಲು; ಪಿಎಸ್ಐ ಅಮಾನತಿಗೆ ಆಗ್ರಹ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನವದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆಯ ಕುಲಪತಿ ಪ್ರೊ. ಶಶಿಕಲಾ ವಂಜಾರಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ್, ಸಿಂಡಿಕೇಟ್ ಸದಸ್ಯರು, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು ಸೇರಿದಂತೆ ಇತರರು ಇದ್ದರು.
