ಜುಲೈ ತಿಂಗಳ ಎರಡನೇ ವಾರದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಈಗಿರುವ ಜಲ ಸಂಪನ್ಮೂಲಗಳನ್ನು ಜಾಗರೂಕತೆಯಿಂದ ನಿರ್ವಹಿಸುವ ಅಗತ್ಯವಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
“ಜಿಲ್ಲೆಯಲ್ಲಿ ಈ ವರ್ಷ ಮಳೆ ಕಡಿಮೆಯಾಗಿರುವುದರಿಂದ ಮುಂದೆ ಉಲ್ಬಣಿಸಬಹುದಾದ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಜನಜಾನುವಾರುಗಳಿಗೆ ಕುಡಿಯುವ ನೀರು, ಮೇವು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ವಿಚಾರದ ಬಗ್ಗೆ ಸಭೆಯಲ್ಲಿ ಸಮರ್ಪಕವಾಗಿ ಚರ್ಚಿಸಿದರು.ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆಯಾದ ಸಂದರ್ಭದಲ್ಲಿ ಅದಾಗ್ಯೂ ಕೊಳವೆಬಾವಿ ಕೊರೆಯಿಸಿ, ವಿದ್ಯುತ್ ಅಳವಡಿಸಿ ನೀರು ಪೂರೈಸಲು ಸಮಯ ಬೇಕಾಗುತ್ತದೆ. ಆದರೆ, ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿಕೊಟ್ಟುಕೊಳ್ಳಲು ಸೂಚಿಸಿದ್ದಾಗಿ ತಿಳಿಸಿದರು.
ಗ್ರಾ.ಪಂ. ಮಟ್ಟದಲ್ಲಿ ಅನಿವಾರ್ಯ ಸಂದರ್ಭದಲ್ಲಿ ಖಾಸಗಿ ಕೊಳವೆಬಾವಿಗಳಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದೂ ಸೂಚಿಸಿದ್ದಾಗಿ ಹೇಳಿದರು.
ವಿದ್ಯುತ್ ಸಮಸ್ಯೆ ಏನಿಲ್ಲ. ಬೀಜ ರಸಗೊಬ್ಬರ ಸಾಕಷ್ಟು ದಾಸ್ತಾನು ಇದೆ. ಜೋಳಕ್ಕೆ ಜಿಐ ಟ್ಯಾಗ್ ಪಡೆದುಕೊಳ್ಳಲು ಸೂಚಿಸಿದೆ. ಇದರಿಂದ ರೈತರಿಗೆ ಅನು-ಕೂಲವಾಗಲಿದೆ. ಈ ವಿಷಯದಲ್ಲಿ ಜಿಲ್ಲಾಧಿಕಾರಿ ಕೆಲಸ ನಿರ್ವಹಿಸುತ್ತಿದ್ದಾರೆ. ಒಣ ದ್ರಾಕ್ಷಿ ಹಾಗೂ ದ್ರಾಕ್ಷಿಗೂ ಟ್ಯಾಕ್ ನೀಡಲು ಸೂಚಿಸಿದ್ದಾಗಿ ತಿಳಿಸಿದರು.
“ಕೃಷ್ಣಾ ನದಿಯಿಂದ ನಗರಕ್ಕೆ ಮತ್ತೊಂದು ಹಂತದಲ್ಲಿ ನೀರು ಪೂರೈಕೆಗೆ ಡಿಪಿಆರ್ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದರು.
ಶಾಸಕ ವಿಠಲ ಕಟಕಧೋಂಡ, ರಾಜುಗೌಡ ಪಾಟೀಲ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಜಿಲ್ಲಾಧಿಕಾರಿ ಡಾ. ಆನಂದ್ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಲಕ್ಷ್ಮಣ ನಿಂಬರಗಿ ಇದ್ದರು.




