ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ವತಿಯಿಂದ ನೀಡಲಾಗುವ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಇತ್ತೀಚೆಗೆ ಗೋವಾದಲ್ಲಿ ನಡೆದ 19ನೇ ಗ್ಲೋಬಲ್ ಕಮ್ಯುನಿಕೇಶನ್ ಸಮ್ಮೇಳನದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಹಾಗೂ ಸಹಾಯಕ ಪ್ರಾಧ್ಯಾಪಕ ಸಂದೀಪ್ ಅವರಿಗೆ ಸ್ವಿಡ್ಜರ್‌ಲೆಂಡ್‌ನ ಡೆಲ್ಲಾ ವಿಶ್ವವಿದ್ಯಾನಿಲಯದ ಮಾಧ್ಯಮ ತಜ್ಞ ಹಾಗೂ ಮಾಧ್ಯಮ ಅಧ್ಯಯನ ವಿಭಾಗದ ಡೀನ್ ಪ್ರೊ.ಮ್ಯಾಥ್ ಹಿಬರ್ಡ್ ಮತ್ತು ನಿರ್ದೇಶಕ, ನಟ ಪ್ರಮೋದ್ ಶೆಟ್ಟಿ ಅವರು ಜಂಟಿಯಾಗಿ ಪ್ರಶಸ್ತಿ ಪ್ರದಾನ ಮಾಡಿದರು. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ ಸಮ್ಮೇಳನದಲ್ಲಿ ಉಪಸ್ಥಿತರಿದ್ದರು.
ದೇಶದ ವಿವಿಧ ಮಾಧ್ಯಮ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೃತ್ತಿ ಮಾರ್ಗದರ್ಶನ ಮತ್ತು ಬೆಂಬಲ ನೀಡುವ ಶ್ರೇಷ್ಠ ಸಾಧನೆಗಾಗಿ ನೀಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಇದಾಗಿದೆ.
ಇದನ್ನೂ ಓದಿ: ವಿಜಯಪುರ | ಅಬಕಾರಿ ಬಾಕಿ ಪಾವತಿಸದ ರೈತನ ಜಮೀನು ಹರಾಜು ಕ್ರಮಕ್ಕೆ ಗ್ರಾಮಸ್ಥರ ವಿರೋಧ
ರಾಷ್ಟ್ರ ಮಟ್ಟದ ಈ ಶ್ರೇಷ್ಠ ಪ್ರಶಸ್ತಿಗೆ ಕಾರಣಕರ್ತರಾಗಿರುವ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ, ಸಹಾಯಕ ಪ್ರಾಧ್ಯಾಪಕ ಡಾ.ತಹಮೀನಾ ಕೋಲಾರ, ಸಂದೀಪ್ ಮತ್ತು ಸಂಶೋಧನಾ ವಿದ್ಯಾರ್ಥಿನಿಯರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರನ್ನು ಅಭಿನಂದಿಸುವುದಾಗಿ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ತಿಳಿಸಿದ್ದಾರೆ.