ಹೆಣ್ಣುಮಕ್ಕಳು ತಮ್ಮ ಭದ್ರತೆಯ ಕುರಿತು ಯಾವುದೇ ಆತಂಕಕ್ಕೆ ಒಳಗಾಗದೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಶಿಕ್ಷಣದ ಜತೆಗೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎಸ್ ಇಂದುಮತಿ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಥಮ ವರ್ಷದ ಯುಜಿ ಹಾಗೂ ಪಿಜಿ ವಿದ್ಯಾರ್ಥಿನಿಯರಿಗಾಗಿ ‘ಪುತ್ರಿಯರ ದಿನ–ಸ್ಪಂದನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಸಮಾನತೆ ಸಾಧಿಸಲು ಶಿಕ್ಷಣದೊಂದಿಗೆ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ. ಆರ್ಥಿಕವಾಗಿ ಸ್ವಾವಲಂಬಿಗಳಾದಾಗ ತಮ್ಮ ಬದುಕಿನ ನಿರ್ಧಾರಗಳನ್ನು ಆತ್ಮವಿಶ್ವಾಸದಿಂದ ಕೈಗೊಳ್ಳಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರಲ್ಲಿರುವ ಪ್ರತಿಭೆಯೇ ಅವರನ್ನು ಮುನ್ನಡೆಸುವ ಪ್ರಮುಖ ಶಕ್ತಿಯಾಗಿದ್ದು, ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಗುರುತಿಸಿ ಅದನ್ನು ಬೆಳೆಸಿಕೊಳ್ಳಬೇಕು ಎಂದರು.
ತಮ್ಮತನವನ್ನು ಉಳಿಸಿಕೊಂಡು ದೇಶದ ಬಗ್ಗೆ ಪ್ರೀತಿ ಬೆಳೆಸಿಕೊಳ್ಳಬೇಕು. ಪರಿಸರ ಹಾಗೂ ಪ್ರಕೃತಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಅರಿತುಕೊಂಡು ಜವಾಬ್ದಾರಿಯುತ ನಾಗರಿಕರಾಗಿ ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಮಾತನಾಡಿ, ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಸ್ಥಾನಮಾನ ಗಳಿಸಿದ್ದಾರೆ. ಕುಟುಂಬದ ಪ್ರೋತ್ಸಾಹ ಹಾಗೂ ಶಿಕ್ಷಕರ ಆಶೀರ್ವಾದದಿಂದ ವಿಶ್ವವಿದ್ಯಾಲಯದ ಹೆಬ್ಬಾಗಿಲಿಗೆ ತಲುಪಿರುವ ವಿದ್ಯಾರ್ಥಿನಿಯರಿಗೆ ತಮ್ಮ ಪ್ರತಿಭೆ ಅರಳಿಸಿಕೊಳ್ಳಲು ವಿಶ್ವವಿದ್ಯಾಲಯ ಹಲವು ಅವಕಾಶಗಳನ್ನು ಒದಗಿಸುತ್ತಿದೆ ಎಂದರು.
ವಿದ್ಯಾರ್ಥಿನಿಯರು ಉತ್ತಮ ಶಿಕ್ಷಣದೊಂದಿಗೆ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬೇಕು. ಬದಲಾಗುತ್ತಿರುವ ಕಾಲಕ್ಕೆ ಅನುಗುಣವಾಗಿ ಶಿಕ್ಷಣದ ಸ್ವರೂಪವೂ ಬದಲಾಗುತ್ತಿದೆ. ಹೀಗಾಗಿ ತಾಂತ್ರಿಕ ಹಾಗೂ ವೃತ್ತಿಪರ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ. ಜತೆಗೆ ದಯೆ, ಜ್ಞಾನ ಹಾಗೂ ನಡೆ-ನುಡಿಯಲ್ಲಿ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ವಿಜಯಕುಮಾರ ಅಜೂರ್ ಮಾತನಾಡಿ, ಜೀವನದ ಪ್ರತಿಯೊಂದು ಹಂತದಲ್ಲೂ ಎದುರಾಗುವ ಉತ್ತಮ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ಶೈಕ್ಷಣಿಕ ಹಾಗೂ ಇತರ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಆರ್ಥಿಕ, ಶೈಕ್ಷಣಿಕ ಸೇರಿದಂತೆ ಜೀವನದ ವಿವಿಧ ಸವಾಲುಗಳನ್ನು ಎದುರಿಸುವ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ವಿದ್ಯಾರ್ಥಿನಿಯರು ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ. ಎಲ್. ಲಕ್ಕಣ್ಣವರ, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಪ್ರಥಮ ವರ್ಷದ ಯುಜಿ ಹಾಗೂ ಪಿಜಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.




