ಕೇಂದ್ರ ಸರಕಾರದ ಬರ ನಿರ್ವಹಣಾ ಮಾನದಂಡಗಳನ್ನು ಆಧರಿಸಿ ವಿಜಯಪುರ ಜಿಲ್ಲೆಯ ಆಲಮೇಲ, ದೇವರ ಹಿಪ್ಪರಗಿ, ಮುದ್ದೇಬಿಹಾಳ ಹಾಗೂ ಸಿಂದಗಿ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ಜಿಲ್ಲೆಯ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅರ್ಹ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲು ಅಗತ್ಯವಿರುವ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿತ್ತು. ಅದರಂತೆ ಸಂಬಂಧಪಟ್ಟ ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ಸೇರಿದಂತೆ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಪರಿಶೀಲನಾ ಕಾರ್ಯಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು.
ಈ ವರದಿಯ ಆಧಾರದ ಮೇಲೆ ಇದೀಗ 4 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ. ತಾಳಿಕೋಟೆ ತಾಲೂಕಿನ ಗ್ರೌಂಡ್ ಟ್ರೂಥಿಂಗ್ ಕಾರ್ಯ ಪ್ರಗತಿಯಲ್ಲಿದೆ. ಪರಿಶೀಲನೆ ಸೇರಿದಂತೆ ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ತಾಳಿಕೋಟೆ ತಾಲೂಕನ್ನೂ ಬರಪೀಡಿತ ತಾಲೂಕು ಎಂದು ಘೋಷಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಈಗಾಗಲೇ ಮೊದಲ ಹಾಗೂ ಎರಡನೇ ಹಂತದಲ್ಲಿ ವಿಜಯಪುರ, ಕೊಲ್ಹಾರ, ನಿಡಗುಂದಿ, ಬಸವನ ಬಾಗೇವಾಡಿ, ಬಬಲೇಶ್ವರ ಹಾಗೂ ತಿಕೋಟಾ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರಕಾರ ಘೋಷಿಸಿತ್ತು.
ಇದೀಗ ಮೂರನೇ ಹಂತದಲ್ಲಿ ಆಲಮೇಲ, ದೇವರ ಹಿಪ್ಪರಗಿ, ಮುದ್ದೇಬಿಹಾಳ ಹಾಗೂ ಸಿಂದಗಿ ತಾಲೂಕುಗಳು ಸೇರ್ಪಡೆಯಾಗಿದ್ದು, ಜಿಲ್ಲೆಯ ಒಟ್ಟು 10 ತಾಲೂಕುಗಳು ತೀವ್ರ ಬರಪೀಡಿತ ತಾಲೂಕುಗಳ ಪಟ್ಟಿಗೆ ಬಂದಂತಾಗಿದೆ.
This video cannot be played in your browser. Open the video directly
ಜಿಲ್ಲೆಯ ಬರ ಪರಿಸ್ಥಿತಿಯನ್ನು ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಗುರುತಿಸಿ, ಅಗತ್ಯ ಪರಿಹಾರ ಹಾಗೂ ಬರ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.





