ವಿಜಯಪುರ ಜಿಲ್ಲೆಯ ಹುಬ್ಬಳ್ಳಿ ರಸ್ತೆಯ ಹೊನಗನಹಳ್ಳಿ ಗ್ರಾಮದ ಸಮೀಪದ ಜಮೀನಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮೃತ ವ್ಯಕ್ತಿಯ ಗುರುತು ಹಾಗೂ ಹೆಸರು ಇನ್ನೂ ಪತ್ತೆಯಾಗಿಲ್ಲ. ಶವದ ಮೈಮೇಲೆ ಗಾಯದ ಗುರುತುಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ, ವ್ಯಕ್ತಿಯನ್ನು ಕೊಲೆ ಮಾಡಿ ಶವವನ್ನು ಜಮೀನಿನಲ್ಲಿ ಎಸೆದು ಹೋಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಜಮೀನಿನಲ್ಲಿ ಶವ ಇರುವುದನ್ನು ಗಮನಿಸಿ ಆತಂಕಗೊಂಡಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆ ಹಾಗೂ ಸಾವಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.



