ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಕಾರ್ಯಕ್ಕೆ ಮುಖಂಡರು ಹಾಗೂ ಕಾರ್ಯಕರ್ತರು ಮುಂದಾಗಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಕರೆ ನೀಡಿದರು.
ವಿಜಯಪುರ ಜಿಲ್ಲೆಯ ಇಂಡಿ ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಸಿದ್ಧತೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆಗಿಂತ ಜನರೊಂದಿಗೆ ನಿರಂತರ ಸಂಪರ್ಕ ಮತ್ತು ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಚುನಾವಣಾ ಸಿದ್ಧತೆಯ ಪ್ರಮುಖ ಭಾಗ ಎಂದು ಹೇಳಿದರು.
ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸೇವೆಯನ್ನು ಕೇಂದ್ರವಾಗಿಟ್ಟುಕೊಂಡು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಕೆಲಸ ಮಾಡಬೇಕು. ಸರ್ಕಾರದ ಜನಪರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಸರ್ಕಾರದ ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದ ಜನರಿಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವು ಮುಖಂಡರು ಹಾಗೂ ಕಾರ್ಯಕರ್ತರು ಟಿಕೆಟ್ ಬಯಸುವುದು ಸಹಜ. ಆದರೆ ಪಕ್ಷದ ಅಭ್ಯರ್ಥಿಯಾಗಿ ಒಬ್ಬರಿಗೆ ಅವಕಾಶ ದೊರೆಯಲಿದೆ. ಟಿಕೆಟ್ ಸಿಗದವರು ಅಸಮಾಧಾನಕ್ಕೆ ಒಳಗಾಗದೆ ಪಕ್ಷದ ಅಧಿಕೃತ ಅಭ್ಯರ್ಥಿಯ ಗೆಲುವಿಗಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ವೈಯಕ್ತಿಕ ಭಿನ್ನಾಭಿಪ್ರಾಯಕ್ಕಿಂತ ಪಕ್ಷದ ಹಿತವೇ ಮುಖ್ಯ ಎಂದು ಯಶವಂತರಾಯಗೌಡ ಪಾಟೀಲ ತಿಳಿಸಿದರು.
This video cannot be played in your browser. Open the video directly
ಟಿಕೆಟ್ ಆಕಾಂಕ್ಷಿಗಳು ಕೇವಲ ಚುನಾವಣಾ ಸಮಯದಲ್ಲಿ ಮಾತ್ರ ಜನರ ನಡುವೆ ಕಾಣಿಸಿಕೊಳ್ಳದೆ, ಈಗಿನಿಂದಲೇ ತಮ್ಮ ವ್ಯಾಪ್ತಿಯ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು. ಜನರ ವಿಶ್ವಾಸ ಗಳಿಸುವ ಮೂಲಕ ಪಕ್ಷದ ಸಂಘಟನೆಗೆ ಬಲ ತುಂಬಬೇಕು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ವಿವಿಧ ಜನಪರ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಪಕ್ಷದ ಪರವಾದ ಸಂಘಟನಾತ್ಮಕ ವಾತಾವರಣ ನಿರ್ಮಿಸಬೇಕು.
ಮುಂಬರುವ ಚುನಾವಣೆಗಳನ್ನು ಎದುರಿಸಲು ಬೂತ್ ಮಟ್ಟದಿಂದಲೇ ಪಕ್ಷವನ್ನು ಸಜ್ಜುಗೊಳಿಸುವ ಅಗತ್ಯವಿದೆ ಎಂದು ಹೇಳಿದರು.
ಸಭೆಯಲ್ಲಿ ಇಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗೆಪ್ಪ ಚನಗೊಂಡ, ಬಳ್ಳೋಳ್ಳಿ ಬ್ಲಾಕ್ ಅಧ್ಯಕ್ಷ ಬಿ.ಸಿ. ಸಾಹುಕಾರ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪ್ರಶಾಂತ ಕಾಳೆ, ಜಾವೇದ್ ಮೋಮಿನ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ತಳಕೇರಿ, ಬಳ್ಳೋಳ್ಳಿ ಘಟಕದ ಅಧ್ಯಕ್ಷೆ ಶೈಲಶ್ರೀ ಜಾಧವ, ಇಂಡಿ ನಗರ ಘಟಕದ ಅಧ್ಯಕ್ಷ ಶ್ರೀಕಾಂತ ಕುಡಿಗನೂರ, ಯುವ ಘಟಕದ ಅಧ್ಯಕ್ಷ ಅವಿನಾಶ ಬಗಲಿ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





