ಮಳೆ ಕೊರತೆಯಿಂದ ಇಂಡಿ ಭಾಗದಲ್ಲಿ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿದ ರೈತ ಶಾಸಕ ಯಶವಂತರಾಯಗೌಡ ಪಾಟೀಲ್, ರೈತರ ಜಮೀನುಗಳಿಗೆ ಭೇಟಿ ನೀಡಿ ವಿವಿಧ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು.
ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಮೆಕ್ಕೆಜೋಳ, ತೊಗರಿ, ಕಬ್ಬು ಹಾಗೂ ಹತ್ತಿ ಸೇರಿದಂತೆ ವಿವಿಧ ಬೆಳೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬೆಳೆದಿಲ್ಲ. ಮಳೆಯ ಅಭಾವದಿಂದ ಬೆಳೆಗಳ ಇಳುವರಿ ಕುಂಠಿತವಾಗುವ ಆತಂಕ ಎದುರಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿ ಹಾಗೂ ಮಳೆಯ ಕೊರತೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ನೇರವಾಗಿ ಅರಿತುಕೊಳ್ಳಲಾಯಿತು. ಈ ಸಂದರ್ಭದಲ್ಲಿ ರೈತರು ತಮ್ಮ ಬೆಳೆ ನಷ್ಟ ಹಾಗೂ ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದರು.
ರೈತರ ನೋವು ಮತ್ತು ಸಂಕಷ್ಟವನ್ನು ನಮ್ಮ ಸರ್ಕಾರದ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು, ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಕುರಿತು ಸಂಬಂಧಿಸಿದ ಅಧಿಕಾರಿಗಳು ಹಾಗೂ ಸರ್ಕಾರದೊಂದಿಗೆ ಚರ್ಚಿಸಲಾಗುವುದು. ರೈತರಿಗೆ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ರೈತ ಬಾಂಧವರಿಗೆ ಭರವಸೆ ನೀಡಿದರು.
ಮಳೆ ಕೊರತೆಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ ನೆರವಿಗೆ ಸರ್ಕಾರ ತಕ್ಷಣ ಸ್ಪಂದಿಸಿ, ಬೆಳೆ ನಷ್ಟದ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕು ಕ್ರಮ ಕೈಗೊಳ್ಳಿಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಅಧಿಕಾರಿಗಳು ಹಾಗೂ ಮತ ಕ್ಷೇತ್ರದ ರೈತರು ಇದ್ದರು.




