ಮಾದಕ ದ್ರವ್ಯಗಳ ವ್ಯಸನ ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಯುವಜನರು ಮಾದಕ ವಸ್ತುಗಳ ಆಮಿಷಕ್ಕೆ ಒಳಗಾಗದೇ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಪಿಎಸ್ಐ ಸಂಜಯ ತಿಪ್ಪರೆಡ್ಡಿ ಸಲಹೆ ನೀಡಿದರು.
ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ-2026ರ ಅಂಗವಾಗಿ ಮುದ್ದೇಬಿಹಾಳ ತಾಲ್ಲೂಕಿನ ಎಂಜಿವಿಸಿ (MGVC) ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಾದಕ ದ್ರವ್ಯಗಳ ಬಳಕೆ ಹಾಗೂ ಮಾರಾಟದಂತಹ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಅರಿವು ನೀಡಿ, ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಮಾದಕ ದ್ರವ್ಯಗಳ ಬಳಕೆ ಮತ್ತು ದುಷ್ಚಟಗಳಿಂದ ದೂರವಿರುವುದಾಗಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಜಾಗೃತಿ ಮೂಡಿಸುವ ಉದ್ದೇಶದಿಂದ ಮಾಹಿತಿಯುಳ್ಳ ಕರಪತ್ರಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳು, ದೂರುಗಳು ಹಾಗೂ ಸಲಹೆಗಳನ್ನು ಗೌಪ್ಯವಾಗಿ ಸಲ್ಲಿಸಲು ಅನುಕೂಲವಾಗುವಂತೆ ಮಹಾವಿದ್ಯಾಲಯದಲ್ಲಿ ದೂರು-ಸಲಹಾ ಪೆಟ್ಟಿಗೆಯನ್ನು ಅಳವಡಿಸಲಾಯಿತು. ಜೊತೆಗೆ ಜಾಗೃತಿ ಕರಪತ್ರವನ್ನು ಕಾಲೇಜಿನ ಸೂಚನಾ ಫಲಕಕ್ಕೆ ಅಂಟಿಸಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಓದುವಂತೆ ವ್ಯವಸ್ಥೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರು, ಉಪನ್ಯಾಸಕರು, ಪೊಲೀಸ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.




