ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿಹಾಳ ಗ್ರಾಮದ ದಲಿತ ಯುವಕನ ಹತ್ಯೆ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಕರ್ನಾಟಕ ಮಾದಿಗರ ಸಂಘದ ವಿಜಯಪುರ ಜಿಲ್ಲಾ ಅಧ್ಯಕ್ಷ ಶ್ರೀಶೈಲ ರತ್ನಾಕರ ಆಗ್ರಹಿಸಿದರು.
ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿದ ಅವರು, “ದಲಿತ ಯುವಕ ಭೂಮಾನಂದ ಅವರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಆರೋಪಗಳು ಕೇಳಿಬಂದಿದ್ದು, ಈ ಘಟನೆ ಮಾನವೀಯತೆ ಮತ್ತು ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಿದೆ” ಎಂದು ಖಂಡಿಸಿದರು.
ಪ್ರಕರಣದ ತನಿಖೆಯನ್ನು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಹಾಗೂ ತ್ವರಿತಗತಿಯಲ್ಲಿ ನಡೆಸಬೇಕು. ಹತ್ಯೆಯಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
“ಮೃತ ಭೂಮಾನಂದ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ, ಸರ್ಕಾರಿ ಉದ್ಯೋಗ ಹಾಗೂ ಅಗತ್ಯ ಭದ್ರತೆ ಒದಗಿಸಿ ನ್ಯಾಯ ದೊರಕುವಂತೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಯಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.
ಇದನ್ನೂ ಓದಿದ್ದೀರಾ? ʼನಗರದಲ್ಲಿದ್ದರೂ 12 ವರ್ಷಗಳಿಂದ ಮೂಲಸೌಲಭ್ಯವಿಲ್ಲʼ: ಕಲಬುರಗಿ ಬುಡ್ಗ ಜಂಗಮರ ಕಣ್ಣೀರಿನ ಕಥೆ
“ಸರ್ಕಾರ ತ್ವರಿತ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಭೂಮಾನಂದ ಹತ್ಯೆ ಪ್ರಕರಣದಲ್ಲಿ ನ್ಯಾಯ ದೊರೆಯುವವರೆಗೆ ಕರ್ನಾಟಕ ಮಾದಿಗರ ಸಂಘದ ವಿಜಯಪುರ ಜಿಲ್ಲಾ ಘಟಕ ಹಾಗೂ ವಿವಿಧ ದಲಿತ ಸಂಘಟನೆಗಳು ಸಂತ್ರಸ್ತ ಕುಟುಂಬದ ಪರವಾಗಿ ಹೋರಾಟ ಮುಂದುವರಿಸಲಿವೆ” ಎಂದು ಎಚ್ಚರಿಕೆ ನೀಡಿದರು.
ಘಟನೆ ಹಿನ್ನೆಲೆ
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿಹಾಳ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಬಿಎಸ್‌ಪಿ ಪಕ್ಷದ ಕಾರ್ಯಕರ್ತ ಹಾಗೂ ದಲಿತ ಮುಖಂಡ ಭೂಮಾನಂದ್ ಹದ್ದಿನಾಳ್(28) ಎಂಬಾತನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ವರದಿಯಾಗಿತ್ತು.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗಾಗಿ ಎರಡು ಪ್ರಮುಖ ತಂಡಗಳನ್ನು ರಚಿಸಲಾಗಿದೆ.




