ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಸಭೆಯಲ್ಲಿಯೂ ಯಾವುದೇ ಸ್ಪಷ್ಟ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಸಮೀಪದ ಯಲಗೂರ ಕ್ರಾಸ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಬ್ರಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸಂಗಮೇಶ ಸಗರ ಮಾತನಾಡಿ, “ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು, ರೈತರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು,ದೆಹಲಿಯಲ್ಲಿ ನಡೆದ ಸಭೆಯ ಬಳಿಕವೂ ಬೇಡಿಕೆಗಳ ಈಡೇರಿಕೆ ಕುರಿತು ಸ್ಪಷ್ಟ ಭರವಸೆ ಸಿಗದಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ. ರೈತರ ಹಿತಾಸಕ್ತಿಯನ್ನು ಕಾಪಾಡಬೇಕಾದ ಸರ್ಕಾರಗಳು ಅವರ ಸಂಕಷ್ಟಗಳಿಗೆ ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸುವ ಅನಿವಾರ್ಯತೆ ಎದುರಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ, “ದೆಹಲಿ ಸಭೆಯಲ್ಲಿಯೂ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಬೇಡಿಕೆಗಳಿಗೆ ಸರ್ಕಾರಗಳು ಸ್ಪಷ್ಟ ನಿರ್ಧಾರ ಪ್ರಕಟಿಸಿ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವವರೆಗೆ ಹೋರಾಟ ಮುಂದುವರಿಸುತ್ತೇವೆ” ಎಂದರು.
ರೈತರು ದೇಶದ ಆಹಾರ ಭದ್ರತೆಯ ಬೆನ್ನೆಲುಬು. ದೇಶದ ಜನರಿಗೆ ಅನ್ನ ನೀಡುವ ರೈತರ ಬದುಕು ಆರ್ಥಿಕವಾಗಿ ಸುರಕ್ಷಿತವಾಗಿರಬೇಕು. ಆದರೆ ಕೃಷಿಗೆ ಬೇಕಾಗುವ ಬೀಜ, ರಸಗೊಬ್ಬರ, ಕೀಟನಾಶಕ, ಡೀಸೆಲ್, ವಿದ್ಯುತ್, ಕೃಷಿ ಯಂತ್ರೋಪಕರಣ ಮತ್ತು ಕಾರ್ಮಿಕರ ವೆಚ್ಚ ನಿರಂತರವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲಿ, ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದಿದ್ದರೆ ಕೃಷಿ ಲಾಭದಾಯಕ ವೃತ್ತಿಯಾಗಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವುದು, ಕಬ್ಬಿಗೆ ವೈಜ್ಞಾನಿಕವಾಗಿ ಮತ್ತು ನ್ಯಾಯಯುತವಾಗಿ ಬೆಲೆ ನಿಗದಿಪಡಿಸುವುದು ಹಾಗೂ ರೈತರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಪರಿಣಾಮಕಾರಿಯಾಗಿ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
- ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು.ಕೃಷಿ ವಿಜ್ಞಾನಿ ಡಾ. ಎಂ.ಎಸ್. ಸ್ವಾಮಿನಾಥನ್ ನೇತೃತ್ವದ ರಾಷ್ಟ್ರೀಯ ರೈತರ ಆಯೋಗವು ರೈತರ ಆದಾಯ, ಕೃಷಿ ವೆಚ್ಚ, ಸಾಲದ ಹೊರೆ, ನೀರಾವರಿ, ಮಾರುಕಟ್ಟೆ ವ್ಯವಸ್ಥೆ ಮತ್ತು ಕೃಷಿಯ ಸುಸ್ಥಿರತೆಯ ಕುರಿತು ಹಲವು ಶಿಫಾರಸುಗಳನ್ನು ಮಾಡಿತ್ತು.
ಈ ಆಯೋಗದ ಪ್ರಮುಖ ಶಿಫಾರಸುಗಳಲ್ಲಿ ಒಂದಾದ ಕನಿಷ್ಠ ಬೆಂಬಲ ಬೆಲೆ (MSP) ನಿರ್ಧಾರದಲ್ಲಿ ಉತ್ಪಾದನಾ ವೆಚ್ಚದ ಜೊತೆಗೆ ರೈತರಿಗೆ ಸಮರ್ಪಕ ಆದಾಯ ದೊರೆಯುವಂತೆ ನೋಡಿಕೊಳ್ಳುವುದು ಪ್ರಮುಖವಾಗಿದೆ. ಈ ಪ್ರತಿಭಟನೆಯಲ್ಲಿ ವಿವಿಧ ತಾಲೂಕು ಸಮಿತಿಯ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಮಾಜಿ ಸೈನಿಕರು ಇತರರು ಹೋರಾಟಕ್ಕೆ ಸಾಕ್ಷಿಯಾದರು.





