ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಬಿ.ಕೆ ಗ್ರಾಮದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ಸಿಂದಗಿ ಹಾಗೂ ಸರ್ಕಾರಿ ತಾಲೂಕು ಆಸ್ಪತ್ರೆ, ಸಿಂದಗಿ ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಬುಧವಾರ ಆಯೋಜಿಸಲಾಯಿತು.
ಶಿಬಿರದಲ್ಲಿ ಸಾರ್ವಜನಿಕರಿಗೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಆಸ್ಪತ್ರೆಯ ಆಪ್ತ ಸಮಾಲೋಚಕಿ ಶ್ರೀಮತಿ ರೂಬಿನಾ ನಧಾಪ್, “ಇತ್ತೀಚಿನ ದಿನಗಳಲ್ಲಿ ಯುವಕರು ಮದ್ಯಪಾನ, ಧೂಮಪಾನ, ಮೊಬೈಲ್ ಹಾಗೂ ಡ್ರಗ್ಸ್‌ನಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ರೈತರು ಹಾಗೂ ಕೂಲಿ ಕಾರ್ಮಿಕರು ಕೆಲಸದ ಒತ್ತಡದಿಂದ ಮಾನಸಿಕ ಆರೋಗ್ಯವನ್ನು ನಿರ್ಲಕ್ಷಿಸುತ್ತಿದ್ದಾರೆ. ಪ್ರತಿ ತಿಂಗಳ ಮೊದಲ ಮಂಗಳವಾರ ವಿಜಯಪುರ ಜಿಲ್ಲಾ ಆಸ್ಪತ್ರೆಯಿಂದ ಮನೋವೈದ್ಯರು ಸಿಂದಗಿಗೆ ಆಗಮಿಸುತ್ತಿದ್ದು, ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆ ಇರುವವರು ಈ ವೈದ್ಯಕೀಯ ಸೇವೆಯ ಪ್ರಯೋಜನ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.
ತಾಲೂಕು ಆಸ್ಪತ್ರೆಯ ಸ್ಟಾಫ್ ನರ್ಸ್ ರಫೀಕ್ ಮುಲ್ಲಾ ಮಾತನಾಡಿ, “ಗ್ರಾಮೀಣ ಭಾಗದ ರೈತರು ಹಾಗೂ ಕೂಲಿ ಕಾರ್ಮಿಕರು ಆರೋಗ್ಯಕ್ಕಿಂತ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ವರ್ಷದಲ್ಲಿ ಕನಿಷ್ಠ ಎರಡು ಬಾರಿ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿದರೆ ಅನೇಕ ಕಾಯಿಲೆಗಳನ್ನು ತಡೆಗಟ್ಟಬಹುದು” ಎಂದು ಸಲಹೆ ನೀಡಿದರು.
ಸಂಗಮ ಸಂಸ್ಥೆಯ ನಿರ್ದೇಶಕ ಪಾ. ಸಂತೋಷ್ ಮಾತನಾಡಿ, “ರೈತರು ಗುಂಪುಗಳನ್ನು ರಚಿಸಿಕೊಂಡು ಸಾವಯವ ಹಾಗೂ ನೈಸರ್ಗಿಕ ಕೃಷಿಗೆ ಒತ್ತು ನೀಡಬೇಕು. ಇದರಿಂದ ಮಣ್ಣಿನ ಫಲವತ್ತತೆ ಹೆಚ್ಚುವುದರ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ಹೇಳಿದರು.
ಶಿಬಿರದಲ್ಲಿ ತಾಲೂಕು ಆಸ್ಪತ್ರೆಯ ಪ್ರಕಾಶ ರಾಠೋಡ (ಲ್ಯಾಬ್ ಟೆಕ್ನಿಷಿಯನ್), ಮಡಿವಾಳಮ್ಮ ಹೀರೆಮಠ, ಸಂಗಮ ಸಂಸ್ಥೆಯ ಸಹನಿರ್ದೇಶಕಿ ಪ್ರಿಯಾಂಕ ಇದ್ದರು.




