ಮಕ್ಕಳಲ್ಲಿ ಉತ್ತಮ ಜ್ಞಾನ, ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸರ್ಕಾರಿ ಶಾಲೆಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಅಂಬೇಡ್ಕರ ಸೇನೆ ತಾಳಿಕೋಟಿ ಅಧ್ಯಕ್ಷ ಗೋಪಾಲ ಹಣಮಂತ ಕಟ್ಟಿಮನಿ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, “ಸರ್ಕಾರಿ ಶಾಲೆಗಳು ಕೇವಲ ಪಠ್ಯ ಬೋಧನೆಗೆ ಸೀಮಿತವಾಗದೆ ಸಮಾಜಕ್ಕೆ ಅಗತ್ಯವಾದ ಉತ್ತಮ ನಾಗರಿಕರನ್ನು ರೂಪಿಸುವ ಕಾರ್ಯದಲ್ಲಿ ತೊಡಗಿವೆ. ಭಾರತ ವಿಶ್ವಗುರುವಾಗಬೇಕಾದರೆ ಗುಣಮಟ್ಟದ ಶಿಕ್ಷಣ ಅತ್ಯಗತ್ಯವಾಗಿದ್ದು, ಅದರಲ್ಲಿ ಸರ್ಕಾರಿ ಶಾಲೆಗಳ ಕೊಡುಗೆ ಅಪಾರವಾಗಿದೆ” ಎಂದು ತಿಳಿಸಿದ್ದಾರೆ.
“ಇತ್ತೀಚಿನ ದಿನಗಳಲ್ಲಿ ಪಾಲಕರು ದೊಡ್ಡ ಕಟ್ಟಡಗಳು ಹಾಗೂ ವಿವಿಧ ಸೌಲಭ್ಯಗಳನ್ನು ಗಮನಿಸಿ ಖಾಸಗಿ ಶಾಲೆಗಳತ್ತ ಹೆಚ್ಚು ಒಲವು ತೋರುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ, ಉನ್ನತ ವಿದ್ಯಾರ್ಹತೆ ಹೊಂದಿರುವ ಅನುಭವಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಅಂಶವನ್ನು ಗಮನಿಸಬೇಕಾಗಿದೆ” ಎಂದು ಹೇಳಿದ್ದಾರೆ.
“ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ದಾಖಲಿಸುತ್ತಿದ್ದು, ಶಿಕ್ಷಣದ ಗುಣಮಟ್ಟವನ್ನು ಇದು ಸಾಬೀತುಪಡಿಸುತ್ತದೆ. ಸಂವಿಧಾನದ ಆಶಯಗಳಾದ ಸಮಾಜವಾದ, ಜಾತ್ಯತೀತತೆ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಸರ್ಕಾರಿ ಶಾಲೆಗಳನ್ನು ಬೆಂಬಲಿಸುವುದು ಅಗತ್ಯವಾಗಿದೆ” ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ಸರ್ಕಾರವು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗಾಗಿ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮೊಟ್ಟೆ ವಿತರಣೆ, ಶಾಲೆಗಳಿಗೆ ಅನುದಾನ, ಕನ್ನಡ-ಇಂಗ್ಲಿಷ್ ದ್ವಿಭಾಷಾ ಬೋಧನೆ, ಸಹಪಠ್ಯ ಚಟುವಟಿಕೆಗಳು ಹಾಗೂ ಕ್ರೀಡೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಪಾಲಕರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು” ಎಂದು ಮನವಿ ಮಾಡಿದ್ದಾರೆ.
“ಕನ್ನಡ ಶಾಲೆ ಉಳಿಸೋಣ, ಕನ್ನಡ ಶಾಲೆ ಬೆಳೆಸೋಣ ಎಂಬ ಘೋಷಣೆಯೊಂದಿಗೆ ಎಲ್ಲರೂ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಂದಾಗಿ, ದೇಶದ ಭವಿಷ್ಯ ನಿರ್ಮಾಣದಲ್ಲಿ ಪಾಲುದಾರರಾಗಬೇಕು” ಎಂದು ಕರೆ ನೀಡಿದ್ದಾರೆ.





