ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ದತ್ತು ಅಥವಾ ಗುತ್ತಿಗೆ ನೀಡುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ರಾಜ್ಯ ಸರ್ಕಾರದ ಪ್ರಯತ್ನ ಖಂಡನೀಯ. ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಖಾಸಗಿ ಶಿಕ್ಷಣ ಮಾಫಿಯಾಗಳಿಗೆ ಒಪ್ಪಿಸಲು ಆಮ್ ಆದ್ಮಿ ಪಕ್ಷ ಬಿಡುವುದಿಲ್ಲ ಎಂದು ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾಸಗಿ ಶಾಲೆಗಳ ಪರವಾಗಿ ಸರ್ಕಾರ ನಿಲ್ಲಲಿದೆ ಎಂದು ಹೇಳಿರುವುದು ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಬಗೆಗಿನ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಸರ್ಕಾರಿ ಶಾಲೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ ಹಾಗೂ ಜಮೀನುಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ನೆಪದಲ್ಲಿ ಖಾಸಗೀಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ದೆಹಲಿ ಮತ್ತು ಪಂಜಾಬ್‌ನಲ್ಲಿ ಆಪ್ ಸರ್ಕಾರಗಳು ಸರ್ಕಾರಿ ಶಾಲೆಗಳನ್ನು ಆಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಿವೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಸಿಎಸ್ಆರ್ ನಿಧಿ ಬಳಸಬೇಕು. ಶಾಲೆಗಳ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಡಿಜಿಟಲ್ ಶಿಕ್ಷಣ ಹಾಗೂ ಶಿಕ್ಷಕರ ತರಬೇತಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಗ್ರಾಮೀಣ ಸರ್ಕಾರಿ ಶಾಲೆಗಳ ಮುಚ್ಚುವಿಕೆ, ಶಾಲೆಗಳ ವಿಲೀನ ಹಾಗೂ ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ಪ್ರಕ್ರಿಯೆಯನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಸರ್ಕಾರಿ ಶಾಲೆಗಳು ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಭವಿಷ್ಯದ ಭರವಸೆಯಾಗಿದ್ದು, ಅವುಗಳನ್ನು ಉಳಿಸಲು ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ರಾಜ್ಯಾದ್ಯಂತ ಜನಜಾಗೃತಿ ಮತ್ತು ಹೋರಾಟ ರೂಪಿಸಲಾಗುವುದು ಎಂದು ಭೋಗೇಶ್ ಸೋಲಾಪುರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




