ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದುವುದರ ಜೊತೆಗೆ ವೈಯಕ್ತಿಕ ಮತ್ತು ಸಾಮಾಜಿಕ ಸುರಕ್ಷತೆಯ ಬಗ್ಗೆಯೂ ಜಾಗೃತರಾಗಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ್ ಎ ಹೇಳಿದರು.
ವಿಜಯಪುರ ನಗರದ ಶಿವಶರಣಿ ಹೇಮರಡ್ಡಿ ಮಲ್ಲಮ್ಮ ಪ್ರೌಢಶಾಲೆಯಲ್ಲಿ ಅಕ್ಟೋಬರ್ 27ರಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ ಹಾಗೂ ಶಾಲೆಯ ಸಹಯೋಗದಲ್ಲಿ ಆಯೋಜಿಸಿದ್ದ ‘ನನ್ನ ಬಾಲ್ಯ ನನ್ನ ಹಕ್ಕು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಸೈಬರ್ ಸುರಕ್ಷತೆ ಮತ್ತು ಆನ್‌ಲೈನ್ ವಂಚನೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಮಕ್ಕಳ ಆರೋಗ್ಯ, ಮಾನಸಿಕ ಸ್ಥಿತಿ, ಪರೀಕ್ಷೆಯ ಭಯ ಹಾಗೂ ಒತ್ತಡ ನಿರ್ವಹಣೆಗೆ ಆದ್ಯತೆ ನೀಡಬೇಕು. ವೈಯಕ್ತಿಕ ಸ್ವಚ್ಛತೆ, ಆರೋಗ್ಯದ ಕಾಳಜಿ ಮತ್ತು ರಸ್ತೆ ನಿಯಮಗಳ ಪಾಲನೆಯೂ ಅತ್ಯಗತ್ಯ. ಮಕ್ಕಳು ಯಾವುದೇ ಸಮಸ್ಯೆ ಎದುರಿಸಿದಾಗ ಅದನ್ನು ಮುಚ್ಚಿಡದೆ ಸಂಬಂಧಪಟ್ಟವರ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಪ್ರಮುಖ ಜವಾಬ್ದಾರಿಯಾಗಿದೆ. ಮಕ್ಕಳಿಗೆ ದೊರೆಯಬೇಕಾದ ಸೌಲಭ್ಯಗಳು ಹಾಗೂ ಅವರ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು. ವಿದ್ಯಾರ್ಥಿಗಳ ಶಿಷ್ಯವೇತನ ಮತ್ತು ಸಾರಿಗೆ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ. ಬಿರಾದಾರ, ಶಾಲಾ ಸಮಿತಿ ಅಧ್ಯಕ್ಷ ಅಶೋಕ್ ಮಾಲಗಾಣ, ಸಿಆರ್‌ಸಿ ಸುಜಾತ ಹಿರೇಮಠ, ಪ್ರೇಮಾವತಿ ಹಿರೇಮಠ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





