ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಇತರೆ ವರ್ಗದವರು ವಾಸವಿರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಂಬಂಧಿಸಿದ ವರ್ಗದ ವಿದ್ಯಾರ್ಥಿಗಳ ಹೊರತು ಇತರರು ಉಳಿದುಕೊಳ್ಳದಂತೆ ಕ್ರಮವಹಿಸಲು ಜಂಟಿ ಸಮಿತಿಗೆ ಸೂಚಿಸಲಾಗಿದೆ ಎಂದು ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ. ಮೂರ್ತಿ ಎಲ್ ಹೇಳಿದರು.
ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತಾನಾಡಿದ ಅವರು, ತೋಟಗಾರಿಕ ಇಲಾಖೆ, ಪಶುಸಂಗೋಪನೆ, ಮೀನುಗಾರಿಕೆ, ಅರಣ್ಯ ಹಾಗೂ ಸಹಕಾರ ಇಲಾಖೆಗಳ ಪ್ರಗತಿಯ ಕುರಿತು ಮಾಹಿತಿ ಪಡೆದರು.
“ಬಗರ್ ಹುಂಕುಂ, ಗೋಮಾಳ ಜಮೀನು ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಸ್ಮಶಾನ ಭೂಮಿ ಜಾಗ ಗುರುತಿಸಿ ಆದ್ಯತೆ ಮೇರೆಗೆ ಸ್ಥಳ ಒದಗಿಸಬೇಕು. ಪಾಲಿಕೆಯ ಒಟ್ಟು ಅನುದಾನದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ ಅನುದಾನ, ಪೌರಕಾರ್ಮಿಕರ ವೇತನ, ಸರ್ಕಾರಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಕುರಿತು ಮಾಹಿತಿ ನೀಡಬೇಕು” ಎಂದು ಸೂಚಿಸಿದರು.
ಇದನ್ನೂ ಓದಿ> ವಿಜಯಪುರ | ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾವಂತ ಮಹಿಳೆಯರ ಪಾತ್ರ ದೊಡ್ಡದು: ಕುಲಪತಿ ಉಜ್ವಲ ಚಕ್ರದೇವ್
“ಕಾನೂನಿನ ವ್ಯಾಪ್ತಿಗೆ ಒಳಪಡುವ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ನಕಲಿ ಜಾತಿ ಪ್ರಮಾಣಪತ್ರ ಪಡೆಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.
“ವಿಜಯಪುರದಲ್ಲಿ ಕುಂದು-ಕೊರತೆಗಳನ್ನು ಆಲಿಸಲಾಗಿದ್ದು, ಲಿಖಿತ ದೂರುಗಳನ್ನು ಸ್ವೀಕರಿಸಿದ್ದೇನೆ. ಗಮನಕ್ಕೆ ತಂದಿರುವ ಎಲ್ಲ ಸಮಸ್ಯೆಗಳಿಗೂ ಪರಿಹಾರ ಒದಗಿಸಲಾಗುವುದು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದವರಿಗೆ ಸ್ಮಶಾನ ಭೂಮಿ ಸಿಗದಿರುವ ಬಗ್ಗೆ ದೂರುಗಳು ಬಂದಿವೆ. ಶೀಘ್ರವಾಗಿ ಸ್ಮಶಾನ ಭೂಮಿ ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.
“ಏಜೆನ್ಸಿ ಮೂಲಕ ಸೇವೆ ಸಲ್ಲಿಸುವ ಹೊರಗುತ್ತಿಗೆ ಸಿಬ್ಬಂದಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಲೋಪ ಎಸಗುವ ಎನ್‌ಜಿಒಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಪೌರಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಿ, ನಿಗದಿತ ಅನುದಾನವನ್ನು ಅದೇ ಉದ್ದೇಶಕ್ಕೆ ವಿನಿಯೋಗಿಸಬೇಕು. ಎಸ್‌ಸಿಪಿ-ಟಿಎಸ್‌ಪಿ ಅನುದಾನ ಬಳಕೆ ಬಗ್ಗೆ ನಾಮಫಲಕ ಅಳವಡಿಸಬೇಕು. ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗುಣಮಟ್ಟದ ಆಹಾರ ಪೂರೈಕೆ, ಮಕ್ಕಳ ಆರೋಗ್ಯ ತಪಾಸಣೆಗೆ ಸೂಕ್ತ ಕ್ರಮ ವಹಿಸಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಆಯೋಗದ ಸದಸ್ಯರಾದ ಎನ್ ದಿವಾಕರ, ಸುನಿಲ್ ಉಕ್ಕಲಿ, ಗೀತಾ ಥಾವಂಶಿ, ಜಿಲ್ಲಾಧಿಕಾರಿ ಡಾ. ಆನಂದ್ ಕೆ, ಜಿಲ್ಲಾ ಪಂಚಾಯತ್ ಸಿಇಒ ರಿಷಿ ಆನಂದ್, ಎಸ್‌ಪಿ ಲಕ್ಷ್ಮಣ ನಿಂಬರಗಿ, ಆಯೋಗದ ಕಾರ್ಯದರ್ಶಿ ಎಚ್ ಎಂ ಶಿವರಾಂ, ಸಂಶೋಧನಾಧಿಕಾರಿ ಸಿಂಧೂ, ಗುರುನಾಥ ದಡ್ಡೆ, ಚಿದಾನಂದ ಗುರುಸ್ವಾಮಿ, ಮಹೇಶ ಪೋತದಾರ, ರಾಜಶೇಖರ ದೈವಾಡಿ ಇದ್ದರು.




