ಧಾರಾಕಾರ ಮಳೆ, ಭೀಮೆ ಹಾಗೂ ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ವಿಪಕ್ಷ ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಅನೇಕ ಹಿರಿಯ ನಾಯಕರ ತಂಡ ಭೇಟಿ ನೀಡಿ ರೈತರ ಅಹವಾಲು ಆಲಿಸಿತು.
ಅಂಜುಟಗಿ, ಅಗರಖೇಡ, ಮಿರಗಿ, ದೇವಣಗಾಂವ ಸೇರಿದಂತೆ ಹಲವಾರು ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು. ಅಕಾಲಿಕ ಮಳೆ ಹಾಗೂ ನದಿ ಪ್ರವಾಹದಿಂದ ದೊಡ್ಡ ಮಟ್ಟದ ನೀರು ಹೊಲಗಳಿಗೆ ನುಗ್ಗಿದ ಪರಿಣಾಮ ಬೆಳೆಗಳಿಗೆ ಆಗಿರುವುದನ್ನು ವೀಕ್ಷಿಸಿದರು. ಅಪಾರ ಪ್ರಮಾಣದ ತೊಗರಿ, ಸೂರ್ಯಪಾನ, ಕಬ್ಬು ನೀರಿನ ಪ್ರವಾಹಕ್ಕೆ ಸಿಲುಕಿದ್ದನ್ನು ಕಂಡು ಆತಂಕ ವ್ಯಕ್ತಪಡಿಸಿದರು.
“ಈ ಸರ್ಕಾರಕ್ಕೆ ಜವಾಬ್ದಾರಿಯೇ ಇಲ್ಲದಂತಾಗಿದೆ, ಇಷ್ಟೊಂದು ತೊಂದರೆ ಎದುರಿಸುತ್ತಿದ್ದರೂ ಸ್ಥಳಕ್ಕೆ ಭೇಟಿ ನೀಡುವ ಸೌಜನ್ಯವೂ ಅವರಿಗೆ ಇಲ್ಲ ಎಂಬುದು ಬೇಜವಾಬ್ದಾರಿ ಸಂಗತಿ, ಆದರೆ ಪ್ರತಿಪಕ್ಷವಾಗಿರುವ ನಾವು ನಿಮ್ಮ ಧ್ವನಿಯಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ” ಎಂದು ಆರ್ ಅಶೋಕ್ ಹೇಳಿದರು.
ಸಂಸದ ರಮೇಶ ಜಿಗಜಿಣಗಿ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಶಾಸಕ ಹಾಗೂ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ, ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ ಸೇರಿದಂತೆ ಇತರರು ಇದ್ದರು.