ವಿಜಯಪುರದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕನ್ನಡದ ಗೀತೆಗಳಿಗೆ ನೃತ್ಯ, ಗಾಯನ ಪ್ರದರ್ಶಿಸಿ ಸಭಿಕರ ಮೆಚ್ಚುಗೆಗೆ ಪಾತ್ರರಾದರು.
ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ಗೀತೆಗಳಿಗೆ ಚಿಣ್ಣರು ಲಯಬದ್ಧವಾಗಿ ಹೆಜ್ಜೆ ಹಾಕಿದರು.
ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಜೋಗದ ಸಿರಿ ಬೆಳಕಿನಲ್ಲಿ,ಕನ್ನಡ ನಾಡು ಚಂದ ಕನ್ನಡದ ಮಾತು ಚಂದ, ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಸೇರಿದಂತೆ ಹಲವು ಕನ್ನಡಾಭಿಮಾನದ ಗೀತೆಗಳಿಗೆ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಪ್ರದರ್ಶಿಸಿದರು. ಮಕ್ಕಳ ಉತ್ಸಾಹಭರಿತ ಪ್ರದರ್ಶನಕ್ಕೆ ಸಭಾಂಗಣ ಚಪ್ಪಾಳೆಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿತು.
ಮಕ್ಕಳಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯ ಅಭಿಮಾನ ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾಂಸ್ಕೃತಿಕ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಬಿರಾದಾರ ಸೇರಿದಂತೆ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ಪಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.




