ವಿಬಿ-ಜಿ ರಾಮ್-ಜಿ ಯೋಜನೆಯಡಿ ಗ್ರಾಮೀಣ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸುವುದರ ಜತೆಗೆ ಕಾಮಗಾರಿ ಸ್ಥಳಗಳಲ್ಲಿ ಕುಡಿಯುವ ನೀರು, ನೆರಳು, ಪ್ರಥಮ ಚಿಕಿತ್ಸೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರ ತಾಲೂಕಿನ ನಾಗಠಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ನಡೆಯುತ್ತಿರುವ ಕೆರೆ ಪುನಶ್ಚೇತನ ಕಾಮಗಾರಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕಾಮಗಾರಿಯ ಪ್ರಗತಿ, ಗುಣಮಟ್ಟ, ಕಾರ್ಮಿಕರ ಹಾಜರಾತಿ ಹಾಗೂ ಮಾನವ ದಿನಗಳ ಸೃಜನೆ ಕುರಿತು ಮಾಹಿತಿ ಪಡೆದರು.
ಕಾರ್ಮಿಕರ ಕೂಲಿ ಪಾವತಿಯಲ್ಲಿ ಯಾವುದೇ ತಾಂತ್ರಿಕ ತೊಂದರೆ ಉಂಟಾಗದಂತೆ ಕ್ರಮವಹಿಸಬೇಕು. ಎಲ್ಲ ಕಾರ್ಮಿಕರ ಫೇಸ್ ಅಥೆಂಟಿಕೇಶನ್ ಕಡ್ಡಾಯವಾಗಿ ಪೂರ್ಣಗೊಳಿಸಿ, ಯೋಜನೆಯಡಿ ನಿರಂತರ ಉದ್ಯೋಗ ಕಲ್ಪಿಸುವ ಮೂಲಕ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿಬಿ-ಜಿ ರಾಮ್-ಜಿ ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ವರ್ಷಕ್ಕೆ 125 ದಿನಗಳ ಉದ್ಯೋಗ ಹಾಗೂ ದಿನಕ್ಕೆ ₹382 ಕೂಲಿ ನೀಡಲಾಗುತ್ತಿದೆ. ಕೃಷಿ ಹೊಂಡ, ದನದ ಶೆಡ್, ಮೇಕೆ ಶೆಡ್, ತೋಟಗಾರಿಕೆ ಅಭಿವೃದ್ಧಿ ಸೇರಿದಂತೆ ವಿವಿಧ ವೈಯಕ್ತಿಕ ಕಾಮಗಾರಿಗಳಿಗೆ ಅವಕಾಶವಿದ್ದು, ಗ್ರಾಮೀಣ ಕುಟುಂಬಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ವಿಜಯಪುರ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕನಿಷ್ಠ 100 ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸಿ, ನಿಗದಿತ ಗುರಿಗೆ ಅನುಗುಣವಾಗಿ ಮಾನವ ದಿನಗಳ ಸೃಜನೆ ಸಾಧಿಸಬೇಕು. ಯಾವುದೇ ಅರ್ಹ ಕುಟುಂಬ ಉದ್ಯೋಗದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಗ್ರಾಮ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಯೋಜನೆಯ ಕುರಿತು ಜಾಗೃತಿ ಮೂಡಿಸಿ, ಉದ್ಯೋಗ ಬಯಸುವ ಎಲ್ಲ ಕುಟುಂಬಗಳನ್ನು ಕಾಮಗಾರಿಗಳಲ್ಲಿ ತೊಡಗಿಸಬೇಕು. ಗ್ರಾಮ ಪಂಚಾಯಿತಿವಾರು ಉದ್ಯೋಗ ಬೇಡಿಕೆ ನೋಂದಣಿ, ಕಾಮಗಾರಿಗಳ ಯೋಜನೆ ಹಾಗೂ ಕಾರ್ಮಿಕರ ಹಾಜರಾತಿಯನ್ನು ನಿಯಮಿತವಾಗಿ ಪರಿಶೀಲಿಸಿ ಉದ್ಯೋಗದ ನಿರಂತರತೆ ಕಾಪಾಡಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.
ಪರಿಶೀಲನೆ ವೇಳೆ ಕಾಮಗಾರಿ ಸ್ಥಳದಲ್ಲಿ 100 ಮಹಿಳೆಯರು ಹಾಗೂ 62 ಪುರುಷರು ಸೇರಿದಂತೆ ಒಟ್ಟು 162 ಕಾರ್ಮಿಕರು ಕೆಲಸ ಮಾಡುತ್ತಿರುವುದು ಕಂಡುಬಂತು. ಬಳಿಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ರಿಷಿ ಆನಂದ, ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ವಸತಿ ನಿಲಯದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಅಡುಗೆ ಸಿಬ್ಬಂದಿಗೆ ಸೂಚಿಸಿದರು.
ನಂತರ ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಶೇ.100ರಷ್ಟು ಹಾಜರಾತಿ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಶಾಲೆಯಲ್ಲಿ ಸ್ವಚ್ಛತೆ, ಶಿಸ್ತು, ಕ್ರೀಡೆ, ದೈಹಿಕ ಶಿಕ್ಷಣ, ನೃತ್ಯ, ಗಾಯನ ಸೇರಿದಂತೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು. ಪ್ರತಿ ಶನಿವಾರ ಶ್ರಮದಾನದ ಮೂಲಕ ಶಾಲಾ ಆವರಣ ಸ್ವಚ್ಛಗೊಳಿಸಿ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸಬೇಕು ಎಂದರು.
9 ಮತ್ತು 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಈಗಿನಿಂದಲೇ ಶಿಸ್ತುಬದ್ಧ ಅಧ್ಯಯನ ನಡೆಸಿ ಗಣಿತ ಹಾಗೂ ವಿಜ್ಞಾನ ವಿಷಯಗಳಲ್ಲಿ ಹೆಚ್ಚಿನ ಪರಿಣತಿ ಗಳಿಸುವಂತೆ ಸಲಹೆ ನೀಡಿದರು. ಮಾದರಿ ಪ್ರಶ್ನೆಪತ್ರಿಕೆಗಳನ್ನು ಬಿಡಿಸುವುದು, ನಿರಂತರ ಅಭ್ಯಾಸ ಹಾಗೂ ಪುನರಾವರ್ತನೆ ಉತ್ತಮ ಫಲಿತಾಂಶಕ್ಕೆ ಪ್ರಮುಖ ಅಂಶಗಳಾಗಿವೆ ಎಂದು ಹೇಳಿದರು.
ವಿದ್ಯಾರ್ಥಿಗಳೊಂದಿಗೆ ಊಟ ಸವಿದ ಸಿಇಒ, ವಸತಿ, ಆಹಾರ ಹಾಗೂ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದರು. ವಸತಿ ನಿಲಯಕ್ಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ, ಸಹಾಯಕ ನಿರ್ದೇಶಕ ಎಸ್.ಆರ್. ಕಟ್ಟಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಮದೇವ ಶಿಂಧೆ, ಜಿಲ್ಲಾ ಐಇಸಿ ಸಂಯೋಜಕಿ ಸುವರ್ಣ ಭಜಂತ್ರಿ, ಉಪ ಪ್ರಾಂಶುಪಾಲ ಬಿ.ಎಂ. ಕೊಪ್ಪದ, ತಾಂತ್ರಿಕ ಸಂಯೋಜಕ ಪರಶುರಾಮ ಶಹಾಪುರ, ಐಇಸಿ ರಾಘವೇಂದ್ರ ಭಜಂತ್ರಿ, ತಾಂತ್ರಿಕ ಸಹಾಯಕ ಮಂಜುನಾಥ ಶಟಗಾರ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಬಿಎಫ್‌ಟಿ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




